ಬೆಂಗಳೂರು: ರಾಜ್ಯದ ಹಲವೆಡೆ ಮಾ.28ರವರೆಗೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗದಲ್ಲಿ ಮಾ.22ರಂದು ಮಳೆ ಸುರಿಯಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ ಮತ್ತು ವಿಜಯಪುರದಲ್ಲಿ ಮಾ.26 ರಿಂದ ಮುಂದಿನ 3 ದಿನ ವರ್ಷಧಾರೆಯಾಗಲಿದೆ ಎಂದು ಇಲಾಖೆ ಮಾಹಿತಿ ಕೊಟ್ಟಿದೆ.
ಉಡುಪಿ, ದಕ್ಷಿಣ ಕನ್ನಡದಲ್ಲಿ ಮಾ.23 ಮತ್ತು ಮಾ.24ರಂದು ಬಿಸಿ ವಾತಾವರಣ ಇರುವುದರಿಂದ ಇಲಾಖೆ, ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಭಾಗದ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 1.6 ಡಿ.ಸೆ.ನಿಂದ 3 ಡಿ.ಸೆ.ವರೆಗೆ ಕುಸಿತವಾಗಿದೆ. ಕೆಲ ಪ್ರದೇಶಗಳಲ್ಲಿ ಮಾತ್ರ ಕನಿಷ್ಠ ತಾಪಮಾನ ವಾಡಿಕೆಗಿಂತ ತುಸು ಅಧಿಕವಾಗಿದೆ.