ಹನೂರು ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲಿ

ಗೌಡೇಗೌಡ
ಗೌಡೇಗೌಡ
Published on
ಹನೂರು: ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಹಾಗೂ ವಿವಿಧ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಜು.30 ರಂದು ಪಟ್ಟಣದ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘ ಹಾಗೂ ಹಸಿರು ಸೇನೆ (ಮೂಲ ಸಿದ್ಧಾಂತ) ಜಿಲ್ಲಾಧ್ಯಕ್ಷ ಗೌಡೇಗೌಡ ತಿಳಿಸಿದರು.
ಈ ಬಾರಿ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಅದರಲ್ಲೂ ಚಾ.ನಗರದಲ್ಲಿ ಸಂಪೂರ್ಣ ಕ್ಷೀಣಗೊಂಡಿದೆ. ಹನೂರು ಭಾಗದಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಆನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಿರುವಾಗ ಜಿಲ್ಲಾ ಉಸ್ತುವಾರಿ ಸಚಿವರು ಈ ಸಂಬಂಧ ಯಾವುದೇ ಸಭೆ ಕರೆಯದಿರುವುದು ನಿಜಕ್ಕೂ ವಿಪರ್ಯಾಸ. ತಾಲೂಕಿನ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಜನರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಟ್ಯಾಂಕರ್ ಮೂಲಕ ಪೂರೈಸುತ್ತಿರುವ ನೀರು ಜನಸಂಖ್ಯೆಗೆ ಅನುಗುಣವಾಗಿ ಸಾಲುತ್ತಿಲ್ಲ. ಇತ್ತ ಜಾನುವಾರುಗಳಿಗೆ ಮೇವಿನ ಸಮಸ್ಯೆ ತಲೆದೂರಿದೆ. ಇದು ಹೀಗೆಯೇ ಮುಂದುವರಿದರೆ ಮುಂದಿನ ದಿನಗಳಲ್ಲಿ ರೈತರು ಹಾಗೂ ಜನರು ತೊಂದರೆ ಅನುಭವಿಸಬೇಕಾಗುತ್ತದೆ. ಆದ್ದರಿಂದ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಬಜೆಟ್‌ನಲ್ಲಿ ಈಗಾಗಲೇ ಘೋಷಣೆಯಾಗಿರುವ 498 ಕೋಟಿ ರೂ. ವೆಚ್ಚದ ಉಡುತೊರೆ ಜಲಾಶಯ ನೀರಾವರಿ ಯೋಜನೆಯನ್ನು ಶೀಘ್ರ ಕಾರ್ಯರೂಪಕ್ಕೆ ತಂದು ಕೆರೆ, ಕಟ್ಟೆಗಳಿಗೆ ನೀರು ತುಂಬಿಸಬೇಕು. ಜಾನುವಾರುಗಳಿಗೆ ಮೇವು ಬ್ಯಾಂಕ್ ತೆರೆಯಬೇಕು. ಗೋಪಿನಾಥಂ ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು. ಹೂಗ್ಯಂನಲ್ಲಿ ನನೆಗುದಿಗೆ ಬಿದ್ದಿರುವ 2,500 ಎಕರೆ ಪೋಡಿಯಾಗಬೇಕು. ಈ ಸಂಬಂಧ ಪ್ರತಿಭಟನೆ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಸಂಘದ ಜಿಲ್ಲಾ ಉಪಾಧ್ಯಕ್ಷ ಲೋಕೇಶ್‌ಗೌಡ, ಮಹಿಳಾ ಘಟಕದ ಅಧ್ಯಕ್ಷೆ ರಾಜಮಣಿ, ಸಂಘಟನಾ ಕಾರ್ಯದರ್ಶಿ ಅಮ್ಜಾದ್‌ಖಾನ್, ತಾಲೂಕು ಅಧ್ಯಕ್ಷ ರಾಜಣ್ಣ, ಪ್ರಧಾನ ಕಾರ್ಯದರ್ಶಿ ವೆಂಕಟಾಚಲ, ಸಂಘಟನಾ ಕಾರ್ಯದರ್ಶಿ ಕುಮಾರ್, ಶಿವಣ್ಣ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net