ಒಂದು ಮಾತು ಸ್ಪಷ್ಟವಾಗಿದೆ. ಅದೇನೆಂದರೆ, ಕರ್ನಾಟಕದ ಆರ್ಥಿಕತೆ ಹಿಂಜರಿಕೆಯತ್ತ ಸಾಗಿದೆ. ಸಿಎಜಿ ವರದಿ, ರಿಸರ್ವ್ ಬ್ಯಾಂಕ್ ಕೊಟ್ಟಿರುವ ಎಚ್ಚರಿಕೆಗಿಂತ ದೊಡ್ಡ ಆರ್ಥಿಕ ಅಪಾಯಕ್ಕೆ ಸಿಲುಕಿದೆ ಕರ್ನಾಟಕ. ಮುಂದಿನ ದಿನಗಳು ಇನ್ನೂ ದುರ್ಬರವಾಗಿವೆ. ಕಾಂಗ್ರೆಸ್ ಸರಕಾರವನ್ನು ರಾಜ್ಯದ ಜನರು ಕ್ಷಮಿಸುವುದಿಲ್ಲ. ಈ ಆಯವ್ಯಯ ಕರ್ಣಕಠೋರ ಮತ್ತು ರಾಜ್ಯಕ್ಕೆ ಭಾರ. ಏಕೆಂದರೆ, ಮುಖ್ಯಮಂತ್ರಿಗಳು ಕೇಂದ್ರದ ನಿಂದನೆಯನ್ನು ಈ ಬಾರಿಯೂ ಮುಂದುವರಿಸಿದರು, ಅದು ಅಗತ್ಯವಿರಲಿಲ್ಲ. ಒಕ್ಕೂಟ ವ್ಯವಸ್ಥೆಯ ಮೂಲತತ್ವವನ್ನೇ ಮರೆತು ತಮ್ಮ ಸರಕಾರದ ಕೆಟ್ಟ ಮಾದರಿಯನ್ನು ಪ್ರಚಾರ ಮಾಡಿಕೊಂಡು ಆತ್ಮರತಿ ಮೆರೆದಿದ್ದಾರೆ. 16ನೇ ಹಣಕಾಸು ಆಯೋಗದಲ್ಲಿ ರಾಜ್ಯದ ತೆರಿಗೆ ಪಾಲನ್ನು 3.61%ರಿಂದ 4.7%ಗೆ ಏರಿಸಲಾಗಿದೆ. ಇದರಿಂದ ಅನಾಮತ್ತಾಗಿ 11,000 ಕೋಟಿ ರೂ.ಗೂ ಹೆಚ್ಚು ಹಣ ರಾಜ್ಯಕ್ಕೆ ಹರಿದುಬರುತ್ತದೆ. ಕೇಂದ್ರದಿಂದ ಹಣ ಬರುವುದು ಕಡಿಮೆ ಆಗಿಲ್ಲ ಎಂಬುದನ್ನು ಅವರ ಬಜೆಟ್ ಪುಸ್ತಕವೇ ಹೇಳುತ್ತದೆ ಎಂದರು.