ಇದೆಲ್ಲ ಒಂದು ಕಡೆಯಾದರೆ, ಹೈಕೋರ್ಟ್ ತೀರ್ಪು ಬರುವ ಮುನ್ನ ಅಂದರೆ, ಇಂದು ಬೆಳಗ್ಗೆ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಜಾರಿ ನಿರ್ದೇಶನಾಲಯ (ED) ಬಿಗ್ ಶಾಕ್ ನೀಡಿದೆ. ಅಕ್ರಮ ಹಣ ವರ್ಗಾವಣೆ ಮತ್ತು ಹವಾಲಾ ಶಂಕೆಯ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ರಾಜ್ಯಾದ್ಯಂತ ಏಕಕಾಲಕ್ಕೆ ಬೃಹತ್ ಕಾರ್ಯಾಚರಣೆ ನಡೆಸಿದ್ದು, ಶಿವಶಂಕರಪ್ಪ ಅವರ ಫ್ಲಾಟ್ ಸೇರಿದಂತೆ ಪ್ರಮುಖರ ಮನೆಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಜಾಲಾಡುತ್ತಿದ್ದಾರೆ. ಬೆಂಗಳೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ರಾಯಚೂರು, ಕಾರವಾರ, ಕಲಬುರಗಿ, ಬೆಳಗಾವಿ ಹಾಗೂ ಗುಜರಾತ್‌ನ ಅಹಮದಾಬಾದ್ ಸೇರಿದಂತೆ ಒಟ್ಟು 21 ವಿವಿಧ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮೆಗಾ ದಾಳಿ ನಡೆಸಿದ್ದಾರೆ. ಸ್ವತಃ ಕೆಪಿಎಸ್‌ಸಿ ಕಚೇರಿ, ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಶಾಂತಾ ಹೊಸಮನಿ, ಹಗರಣದ ಮಧ್ಯವರ್ತಿಗಳು ಮತ್ತು ಡಿಜಿಟಲ್ ಮೌಲ್ಯಮಾಪನ ಸಂಸ್ಥೆಯಾದ ‘M/s ಎಡುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್’ ಕಚೇರಿ ಹಾಗೂ ಆಯ್ಕೆಯಾದ ಕೆಲ ಅಭ್ಯರ್ಥಿಗಳ ಮನೆಗಳ ಮೇಲೆ ಸಿಆರ್‌ಪಿಎಫ್ ಭದ್ರತೆಯೊಂದಿಗೆ ಇಡಿ ಅಧಿಕಾರಿಗಳು ಮುಗಿಬಿದ್ದಿದ್ದಾರೆ.