ಅರಕಲಗೂಡು: ಪಟ್ಟಣದ ಸರ್ಕಾರಿ ಪದವಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜು.18ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಎ.ಮಂಜು ಮನವಿ ಮಾಡಿದರು.
ಸಿಡಿಸಿ ಹಾಗೂ ಕಾಲೇಜು ಸಹಯೋಗದಲ್ಲಿ ನಡೆಯಲಿರುವ ಮೇಳದಲ್ಲಿ ಸುಮಾರು 12 ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿವೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಬಿಇ, ಬಿಬಿಎಂ, ಇಂಜಿನಿಯರಿಂಗ್, ವಿಜ್ಞಾನ ವಿಭಾಗ ಹಾಗೂ ಯಾವುದೇ ಪದವಿ ಪಡೆದಿರುವ ಅರ್ಹ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದು. ನೋಂದಣಿ ಸಂಪೂರ್ಣ ಉಚಿತವಾಗಿದ್ದು, ಸ್ಥಳದಲ್ಲೇ ಹೆಸರು ನೋಂದಾಯಿಸಿಕೊಂಡು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದರು.
ಉದ್ಯೋಗ ಪಡೆಯಲು ಬಯಸುವ ಯುವಜನರು ಈ ಮೇಳವನ್ನು ಸದುಪಯೋಗಪಡಿಸಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಯಾವುದೇ ಮಧ್ಯವರ್ತಿಗಳಿಲ್ಲದೆ ಕಂಪನಿಗಳೇ ನೇರವಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿವೆ. ಇಂತಹ ಅವಕಾಶಗಳು ಅಪರೂಪವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಉದ್ಯೋಗದ ಮೂಲಕ ಯುವಕರ ಜೀವನಕ್ಕೆ ಭದ್ರ ನೆಲೆ ಕಲ್ಪಿಸುವುದು ತಮ್ಮ ಆಶಯವಾಗಿದ್ದು, ತಾಲೂಕಿನ ಎಲ್ಲ ಅರ್ಹ ಅಭ್ಯರ್ಥಿಗಳು, ಕಾಲೇಜು ವಿದ್ಯಾರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉತ್ತಮ ಉದ್ಯೋಗ ಪಡೆದುಕೊಳ್ಳಬೇಕು ಎಂದರು.
ಪ್ರಾಂಶುಪಾಲರಾದ ಮಂಜುನಾಥ್, ಬಿಜಿಎಸ್ ಕಾಲೇಜು ಪ್ರಾಂಶುಪಾಲ ಮಹೇಶ್ ಹೊಡೆನೂರು, ಸಿಡಿಸಿ ಸಮಿತಿ ಸದಸ್ಯರು ಸುದ್ದಿಗೋಷ್ಠಿಯಲ್ಲಿದ್ದರು.