ಮದನಪಲ್ಲಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ ಕುಲಪತಿ ಡಾ.ಯುವರಾಜ್ ಹೇಳಿಕೆ
ಮುಳಬಾಗಿಲು: ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಲ್ಲಿ ಕೌಶಲ ಹೆಚ್ಚಿಸಲು ಪ್ರಾಥಮಿಕ ಶಿಕ್ಷಣದಿಂದಲೇ ಪ್ರಯತ್ನಿಸಬೇಕು. ನಾನಾ ವಿಷಯಗಳ ಬಗ್ಗೆ ವಸ್ತು ಪ್ರದರ್ಶನ ಏರ್ಪಡಿಸಿ ಅರಿವು ಮೂಡಿಸಬೇಕು ಎಂದು ಮದನಪಲ್ಲಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ ಕುಲಪತಿ ಡಾ.ಯುವರಾಜ್ ತಿಳಿಸಿದರು. skills
ನಗರದ ಅಮರಜ್ಯೋತಿ ವಿದ್ಯಾಸಂಸ್ಥೆಯ ಪೂರ್ವ ಪ್ರಾಥಮಿಕ ಶಾಲಾ ವಿಭಾಗದಿಂದ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಪಠ್ಯ ಹಾಗೂ ಪತ್ಯೇತರ ಚಟುವಟಿಕೆಗಳಿಗೆ ಸಮಾನ ಅವಕಾಶ ನೀಡಿದರೆ ಬಹುಮುಖ ಪ್ರತಿಭಾವಂತರಾಗುತ್ತಾರೆ ಎಂದು ತಿಳಿಸಿದರು.
ವಿದ್ಯಾಸಂಸ್ಥೆ ಅಧ್ಯಕ್ಷ ಕಾಡೇನಹಳ್ಳಿ ನಾಗರಾಜ್ ಮಾತನಾಡಿ, ಅಮರಜ್ಯೋತಿ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳಿಗೆ ಶಿಸ್ತಿನ ಜತೆಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ತಿಳಿಸಿದರು.
ವಿದ್ಯಾಸಂಸ್ಥೆ ಕಾರ್ಯದರ್ಶಿ ಯಲುವಹಳ್ಳಿ ಆರ್.ಅಶೋಕ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಗಿದ್ದು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದಾರೆ ಎಂದರು.