ಹಿಂದಿನ ಸಾಲಿನಲ್ಲಿ ಘೋಷಿಸಿದಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು, ಪಾಲಿಟೆಕ್ನಿಕ್ಗಳು ಮತ್ತು ಯುವಿಸಿಇ ವಿಶ್ವವಿದ್ಯಾಲಯದಲ್ಲಿ ಒಟ್ಟಾರೆ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿಸಲಾಗಿದೆ. ಸದರಿ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು. ಮುಂದುವರೆದು, ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಶೇ.50ಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿರುವ 25 ಸರ್ಕಾರಿ ಪದವಿ ಕಾಲೇಜು, ಮೂರು ಪಾಲಿಟೆಕ್ನಿಕ್ ಹಾಗೂ ಮೂರು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ತಲಾ ಒಂದು ಕೋಟಿ ರೂ.ಗಳಂತೆ ಒಟ್ಟು 31 ಕೋಟಿ ರೂ.ಗಳ ವೆಚ್ಚದಲ್ಲಿ ವಿದ್ಯಾರ್ಥಿನಿಯರಿಗೆ ಅವಶ್ಯವಿರುವ ಮೂಲ ಸೌಲಭ್ಯಗಳನ್ನು ಒದಗಿಸಲಾಗುವುದು. 1,000ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಒಟ್ಟು 50 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ ಪೀಠೋಪಕರಣಗಳು ಹಾಗೂ ಕಟ್ಟಡಗಳ ದುರಸ್ತಿ/ನವೀಕರಣ ಕಾಮಗಾರಿಗಳನ್ನು 100 ಕೋಟಿ ರೂ.ಗಳ ವೆಚ್ಚದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಕೈಗೊಳ್ಳಲಾಗುವುದು ಎಂದು ಘೋಷಣೆ ಮಾಡಿದರು.