ತಾಲೂಕಿನ ಚಿಕ್ಕತುಪ್ಪೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅನುಪಮ ಸೇವಾ ಟ್ರಸ್ಟ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಮಕ್ಕಳ ಹಕ್ಕುಗಳು ಮತ್ತು ಪೋಕ್ಸೋ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಹಕ್ಕುಗಳ ಕುರಿತು ಪ್ರತಿಯೊಬ್ಬ ವಿದ್ಯಾರ್ಥಿಗೂ ಸಮಗ್ರ ಅರಿವು ಅಗತ್ಯ ಎಂದು ಹೇಳಿದರು.
ಸಂವಿಧಾನದಲ್ಲಿ ಮಕ್ಕಳಿಗೆ ಹಲವು ಹಕ್ಕುಗಳನ್ನು ಒದಗಿಸಿದ್ದು, ಬದುಕುವ ಹಕ್ಕು, ಶಿಕ್ಷಣ ಪಡೆಯುವ ಹಕ್ಕು ಹಾಗೂ ಹಿಂಸೆಯಿಂದ ರಕ್ಷಣೆ ಪಡೆಯುವ ಹಕ್ಕುಗಳು ಪ್ರಮುಖವಾಗಿವೆ. ಪೋಕ್ಸೋ ಕಾಯ್ದೆ 2012ರಲ್ಲಿ ಜಾರಿಗೆ ಬಂದಿದ್ದು, ಮಕ್ಕಳನ್ನು ವಿಶೇಷವಾಗಿ ಹೆಣ್ಣು ಮಕ್ಕಳನ್ನು ಲೈಂಗಿಕ ದೌರ್ಜನ್ಯ ಹಾಗೂ ಶೋಷಣೆಯಿಂದ ರಕ್ಷಿಸುವ ಮಹತ್ವದ ಕಾನೂನಾಗಿದೆ. ವಿದ್ಯಾರ್ಥಿಗಳು ಈ ಕಾಯ್ದೆಯ ಕುರಿತು ಅರಿವು ಹೊಂದುವುದರ ಜತೆಗೆ ಉತ್ತಮ ಸಂಸ್ಕಾರ, ಶಿಸ್ತು ಮತ್ತು ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಅನುಪಮ ಸೇವಾ ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷೆ ಡಾ.ಪ್ರೇಮಾ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಜತೆಗೆ ಬಾಲ್ಯ ವಿವಾಹಗಳು ಕೂಡ ಅಧಿಕವಾಗಿವೆ. ಇವುಗಳನ್ನು ತಡೆಯಲು ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಅಗತ್ಯ ಎಂದರು.