ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ

ರಬಕವಿ-ಬನಹಟ್ಟಿ ಸಮೀಪದ ಕೃಷ್ಣಾ ನದಿಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೀರು.
ರಬಕವಿ-ಬನಹಟ್ಟಿ ಸಮೀಪದ ಕೃಷ್ಣಾ ನದಿಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೀರು.
Published on

ಪ್ರಮುಖ ಮುಖ್ಯಾಂಶಗಳು

  • ನದಿ ಪಾತ್ರದ ಜನರಲ್ಲಿ ಆತಂಕ
  • ತಾಲೂಕು ಆಡಳಿತ ಮುನ್ನೆಚ್ಚರಿಕೆ ಕ್ರಮ

ರಬಕವಿ/ಬನಹಟ್ಟಿ: ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕೃಷ್ಣಾ ನದಿಯಲ್ಲಿ ನೀರಿನ ಹರಿವು ಗಣನೀಯವಾಗಿ ಹೆಚ್ಚಾಗಿದ್ದು, ರಬಕವಿ-ಬನಹಟ್ಟಿ ಸಮೀಪದ ಮಹಿಷವಾಡಗಿ ಸೇತುವೆ ಬಳಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದ ನದಿ ಪಾತ್ರದ ಗ್ರಾಮಗಳ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಹಿಪ್ಪರಗಿ ಜಲಾಶಯಕ್ಕೆ ಸೋಮವಾರ ಬೆಳಗ್ಗೆ ಸುಮಾರು 1,19,200 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 79,500 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ ಎಂದು ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರದ ಕೊಯ್ನ ಜಲಾಶಯ ಸೇರಿ ಮೇಲ್ಭಾಗದ ಅಣೆಕಟ್ಟುಗಳಿಂದ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆಯಾಗುವ ಸಾಧ್ಯತೆ ಇರುವುದರಿಂದ ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಕೃಷ್ಣಾ ನದಿ ತೀರದ ಜನತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಾಲೂಕು ಆಡಳಿತ ಸೂಚಿಸಿದೆ.
ನದಿ ಪಾತ್ರದಲ್ಲಿರುವ ಗ್ರಾಮಸ್ಥರು, ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸಿದ್ಧರಾಗಿರಬೇಕು. ಪ್ರವಾಹದ ತಕ್ಷಣದ ಯಾವುದೇ ಮುನ್ನೆಚ್ಚರಿಕೆ ಇಲ್ಲದಿದ್ದರೂ, ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸಲಾಗುತ್ತಿದ್ದು, ನದಿ ತೀರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದರ ಮಧ್ಯೆ ಬೆಳಗಾವಿ ಜಿಲ್ಲೆಯ ಕುಡಚಿ ಸೇತುವೆ ಮೇಲೆ ನೀರು ಹರಿಯುತ್ತಿರುವುದರಿಂದ ಭಾನುವಾರ ರಾತ್ರಿಯಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ಪರಿಣಾಮವಾಗಿ ರಬಕವಿಯಿಂದ ಮಿರಜ್‌ಗೆ ತೆರಳುವ ಎಲ್ಲಾ ಬಸ್‌ಗಳು ಹಾರೂಗೇರಿ ಕ್ರಾಸ್ ಹಾಗೂ ಅಥಣಿ ಮಾರ್ಗವಾಗಿ ಸಂಚರಿಸುತ್ತಿವೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net