ಹನೂರು: ಏತ ನೀರಾವರಿ ಯೋಜನೆ ರೂಪಿಸುವಂತೆ ಆಗ್ರಹಿಸಿ ಕಳೆದ 43 ದಿನಗಳಿಂದ ತಾಲೂಕಿನ ವಡಕೆಹಳ್ಳದಲ್ಲಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಸೋಮವಾರ ಕೆಆರ್‌ಎಸ್ ಪಕ್ಷದ ಪದಾಧಿಕಾರಿಗಳು ಆಗಮಿಸಿ ಬೆಂಬಲ ಸೂಚಿಸಿದರು.
ನೀರಾವರಿ ಯೋಜನೆಯನ್ನು ರೂಪಿಸಿವಂತೆ ರೈತ ಸಂಘ ಹಾಗೂ ದಂಟಳ್ಳಿ ಏತ ನೀರಾವರಿ ಹೋರಾಟ ಸಮಿತಿ ವತಿಯಿಂದ ರೈತರು ಕಳೆದ 43 ದಿನಗಳಿಂದ ಆಹೋ ರಾತ್ರಿ ಧರಣಿ ಕೈಗೊಂಡಿದ್ದಾರೆ. ಆದರೆ ಬೇಡಿಕೆ ಈಡೇರಿಲ್ಲ. ಹಾಗಾಗಿ ಮಹಿಳೆಯರು, ಯುವಕರು, ಚರ್ಚ್ ಫಾದರ್‌ಗಳು ಸೇರಿದಂತೆ ಸಂಘ ಸಂಸ್ಥೆ ಪದಾಧಿಕಾರಿಗಳು ಧರಣಿ ಸ್ಥಳಕ್ಕೆ ಆಗಮಿಸಿ ಬೆಂಬಲ ಸೂಚಿಸಿದ್ದಾರೆ.
ಶಾಸಕ ಎಂ.ಆರ್. ಮಂಜುನಾಥ್ ಹಾಗೂ ತಹಸೀಲ್ದಾರ್ ಕೆ.ಎನ್.ಚೈತ್ರಾ ಅವರು ಭೇಟಿ ನೀಡಿ ಅಗತ್ಯ ಭರವಸೆ ನೀಡಿದ್ದರು. ಇತ್ತೀಚಿಗೆ ಜಿಲ್ಲಾಧಿಕಾರಿ ಸಿ.ಟಿ ಶಿಲ್ಪಾನಾಗ್ ಅವರು ಧರಣಿ ಸ್ಥಳಕ್ಕೆ ಆಗಮಿಸಿ ಅಗತ್ಯ ಭರವಸೆ ನೀಡಿ ಧರಣಿ ಕೈ ಬಿಡುವಂತೆ ಮನವಿ ಮಾಡಿದ್ದರು. ಆದರೆ ಇದಕ್ಕೊಪ್ಪದ ಧರಣಿ ನಿರತರು ಬೇಡಿಕೆ ಈಡೇರುವವರೆಗೂ ಪ್ರತಿಭಟನೆಯನ್ನು ಕೈ ಬಿಡುವುದಿಲ್ಲ ಎಂದು ಮುಂದುವರಿಸಿದ್ದಾರೆ. ಸೋಮವಾರ ಕೆಆರ್‌ಎಸ್ ಪಕ್ಷದ ಪದಾಧಿಕಾರಿಗಳು ಧರಣಿ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಆಲಿಸಿ ಬೇಡಿಕೆ ಈಡೇರದ ಬಗ್ಗೆ ಆಕ್ಷೇಪವನ್ನು ವ್ಯಕ್ತಪಡಿಸಿ ಬೆಂಬಲ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೆಆರ್‌ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷೆ ಮಹದೇವಮ್ಮ, ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೇತ್ರಾ, ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ ಶಾಸ್ತ್ರಿ, ಚಾ.ನಗರ ಜಿಲ್ಲಾಧ್ಯಕ್ಷ ಗಿರೀಶ್, ಮಂಡ್ಯ ಜಿಲ್ಲಾಧ್ಯಕ್ಷ ಶಿವಮೂರ್ತಿ, ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶೈಲೇಂದ್ರ, ಮಾರ್ಟಳ್ಳಿ ಗ್ರಾಮ ಘಟಕದ ಅಧ್ಯಕ್ಷ ಅರ್ಪುದರಾಜ್, ಕಾರ್ಯದರ್ಶಿ ಲೂರ್ದುಸ್ವಾಮಿ ಇತರರು ಇದ್ದರು.