ಮಾವಿನ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ ರೈತ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ ಮೂಲಕ ನೆರವಿಗೆ ಧಾವಿಸಲು ಕುಮಾರಸ್ವಾಮಿ ಮನವಿ

ಎಚ್.ಡಿ.ಕುಮಾರಸ್ವಾಮಿ
ಎಚ್.ಡಿ.ಕುಮಾರಸ್ವಾಮಿ
Published on

ಪ್ರಮುಖ ಮುಖ್ಯಾಂಶಗಳು

  • ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ (ಎಂಐಎಸ್) ಹಾಗೂ ಬೆಲೆ ಕೊರತೆ ಪಾವತಿ ಯೋಜನೆ (ಪಿಡಿಪಿಎಸ್) ಅಡಿಯಲ್ಲಿ ಬೆಂಬಲ ಬೆಲೆ ಘೋಷಿಸಿ
  • ಪ್ರಸಕ್ತ ಹಂಗಾಮಿನಲ್ಲಿ ಸುಮಾರು 10 ಲಕ್ಷ ಮೆಟ್ರಿಕ್ ಟನ್ ಮಾವು ಉತ್ಪಾದನೆಯಾಗಿದೆ
ಬೆಂಗಳೂರು:
ರಾಜ್ಯದಲ್ಲಿ ಮಾವಿನ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಧಾವಿಸುವಂತೆ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
2026-27ನೇ ಸಾಲಿನ ಮಾವು ಬೆಳೆ ಹಂಗಾಮಿನಲ್ಲಿ ರೈತರು ಎದುರಿಸುತ್ತಿರುವ ತೀವ್ರ ಬೆಲೆ ಕುಸಿತದ ಸಮಸ್ಯೆಯನ್ನು ಉಲ್ಲೇಖಿಸಿರುವ ಕುಮಾರಸ್ವಾಮಿ, ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ (ಎಂಐಎಸ್) ಹಾಗೂ ಬೆಲೆ ಕೊರತೆ ಪಾವತಿ ಯೋಜನೆ (ಪಿಡಿಪಿಎಸ್) ಅಡಿಯಲ್ಲಿ ಬೆಂಬಲ ಬೆಲೆ ಘೋಷಿಸಿ ರೈತರಿಗೆ ಪರಿಹಾರ ಒದಗಿಸುವಂತೆ ಕೋರಿದ್ದಾರೆ.
ಪತ್ರದಲ್ಲಿ ರಾಜ್ಯದ ಮಾವು ಬೆಳೆಗಾರರು ಮಾರುಕಟ್ಟೆ ಬೆಲೆ ಕುಸಿತ, ಪ್ರತಿಕೂಲ ಹವಾಮಾನ ಹಾಗೂ ಹೆಚ್ಚುತ್ತಿರುವ ಕೃಷಿ ವೆಚ್ಚಗಳಿಂದಾಗಿ ಭಾರೀ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ವಿವರಿಸಿದ್ದಾರೆ. ಕರ್ನಾಟಕವು ದೇಶದ ಪ್ರಮುಖ ಮಾವು ಉತ್ಪಾದಕ ರಾಜ್ಯಗಳಲ್ಲಿ ಒಂದಾಗಿದ್ದು, ಸುಮಾರು 1.45 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದೆ. ಪ್ರಸಕ್ತ ಹಂಗಾಮಿನಲ್ಲಿ ಸುಮಾರು 10 ಲಕ್ಷ ಮೆಟ್ರಿಕ್ ಟನ್ ಮಾವು ಉತ್ಪಾದನೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ಧಾರವಾಡ, ತುಮಕೂರು ಹಾಗೂ ಹಾವೇರಿ ಜಿಲ್ಲೆಗಳ ಸಾವಿರಾರು ರೈತ ಕುಟುಂಬಗಳು ಮಾವು ಕೃಷಿಯನ್ನೇ ಜೀವನಾಧಾರವಾಗಿಸಿಕೊಂಡಿವೆ. ಆದರೆ ಮಾರುಕಟ್ಟೆಯಲ್ಲಿ ಅತಿಯಾದ ಪೂರೈಕೆ ಮತ್ತು ಬೆಲೆ ಏರಿಳಿತಗಳಿಂದಾಗಿ ರೈತರು ತಮ್ಮ ಉತ್ಪನ್ನಗಳನ್ನು ಲಾಭದಾಯಕ ಬೆಲೆಗಿಂತ ಕಡಿಮೆ ದರಕ್ಕೆ ಮಾರಾಟ ಮಾಡುವ ಅನಿವಾರ್ಯತೆಗೆ ಸಿಲುಕಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಕೃಷಿ ಬೆಲೆ ಆಯೋಗದ ಅಂದಾಜಿನ ಪ್ರಕಾರ ಮಾವು ಬೆಳೆಯ ಸಿ-3 ಉತ್ಪಾದನಾ ವೆಚ್ಚ ಪ್ರತಿ ಕ್ವಿಂಟಲ್‌ಗೆ ₹3,951 ಆಗಿದ್ದು, ಪ್ರಸ್ತುತ ಮಾರುಕಟ್ಟೆ ಬೆಲೆಗಳು ಅದಕ್ಕಿಂತ ಸಾಕಷ್ಟು ಕಡಿಮೆಯಿರುವುದರಿಂದ ರೈತರು ಭಾರೀ ನಷ್ಟ ಅನುಭವಿಸುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಪಿಡಿಪಿಎಸ್ ಯೋಜನೆಯಡಿ ಬೆಂಬಲ ಬೆಲೆ ನೀಡಿದರೆ ಮಾರುಕಟ್ಟೆ ದರ ಮತ್ತು ರೈತರ ಆದಾಯದ ನಡುವಿನ ಅಂತರವನ್ನು ಕಡಿಮೆ ಮಾಡಬಹುದು. ಇದರಿಂದ ಮಾವು ಬೆಳೆಗಾರರಿಗೆ ಆದಾಯ ಭದ್ರತೆ ದೊರೆಯಲಿದೆ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ವಿಶೇಷವಾಗಿ ತೋಟಗಾರಿಕೆ ಆಧಾರಿತ ಆರ್ಥಿಕತೆಯನ್ನು ಹೊಂದಿರುವ ಕೋಲಾರದಂತಹ ಜಿಲ್ಲೆಗಳಲ್ಲಿ ಈ ನೆರವು ಅತ್ಯಂತ ಪರಿಣಾಮಕಾರಿಯಾಗಲಿದೆ ಎಂದು ಹೇಳಿರುವ ಅವರು, ಕರ್ನಾಟಕ ಸರ್ಕಾರದ ಸಮನ್ವಯದೊಂದಿಗೆ ಈ ಪ್ರಸ್ತಾವನೆಯನ್ನು ಶೀಘ್ರ ಪರಿಶೀಲಿಸಿ ಅಗತ್ಯ ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಕೃಷಿ ಸಚಿವಾಲಯವನ್ನು ಆಗ್ರಹಿಸಿದ್ದಾರೆ.
ಮಾವು ಬೆಳೆಗಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ತುರ್ತು ನೆರವು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಅವರು ಮನವಿ ಮಾಡಿದ್ದಾರೆ.

*ಕರ್ನಾಟಕ ಕೃಷಿ ಬೆಲೆ ಆಯೋಗದ ಅಂದಾಜಿನ ಪ್ರಕಾರ ಮಾವು ಬೆಳೆಯ ಸಿ-3 ಉತ್ಪಾದನಾ ವೆಚ್ಚ ಪ್ರತಿ ಕ್ವಿಂಟಲ್‌ಗೆ ₹3,951 ಆಗಿದ್ದು, ಪ್ರಸ್ತುತ ಮಾರುಕಟ್ಟೆ ಬೆಲೆಗಳು ಅದಕ್ಕಿಂತ ಸಾಕಷ್ಟು ಕಡಿಮೆಯಿರುವುದರಿಂದ ರೈತರು ಭಾರೀ ನಷ್ಟ ಅನುಭವಿಸುತ್ತಿದ್ದಾರೆ

-ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ



ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net