ಪ್ರಾಧಿಕಾರದ ಅಧ್ಯಕ್ಷ ಚನ್ನಪ್ಪ ಕಟ್ಟಿ ಗುರುವಾರ ಪ್ರಶಸ್ತಿ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಕನ್ನಡ ಹಾಗೂ ಇತರ ಭಾಷೆಗಳ ನಡುವೆ ಅನುವಾದಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗಿದೆ. ವಿವಿಧ ಇಂಗ್ಲಿಷ್ ಕೃತಿಗಳನ್ನು ಕನ್ನಡ ಮತ್ತು ಕೊಂಕಣಿ ಭಾಷೆಗೆ ಅನುವಾದಿಸಿರುವ ಹಾಸನದ ಜೆ.ವಿ. ಕಾರ್ಲೊ, ಕನ್ನಡದಿಂದ ಇಂಗ್ಲಿಷ್‌ಗೆ ಹಾಗೂ ಇಂಗ್ಲಿಷ್‌ನಿಂದ ಕನ್ನಡಕ್ಕೆ ಅನೇಕ ಕೃತಿಗಳನ್ನು ಅನುವಾದಿಸಿರುವ ಬೆಂಗಳೂರಿನ ವನಮಾಲಾ ವಿಶ್ವನಾಥ್, ಜಾನಪದ ಮತ್ತು ಅನುವಾದ ಕ್ಷೇತ್ರಕ್ಕೆ ಕೊಡುಗೆಗಳನ್ನು ನೀಡಿರುವ ಚಿತ್ರದುರ್ಗದ ಕೆ.ಆರ್. ಸಂಧ್ಯಾ ರೆಡ್ಡಿ, ಮರಾಠಿ ಹಾಗೂ ಮಲಯಾಳಂ ಭಾಷೆಯಿಂದ ಕನ್ನಡಕ್ಕೆ ಅನೇಕ ಮಹತ್ವದ ಕೃತಿಗಳನ್ನು ಅನುವಾದಿಸಿರುವ ಹೊಸಪೇಟೆಯ ವಿಠಲರಾವ್ ಟಿ. ಗಾಯಕ್ವಾಡ್ ಹಾಗೂ ಮರಾಠಿ ಭಾಷೆಯಲ್ಲಿ ರಚಿತವಾದ ಸಮಾಜ ಸುಧಾರಕರ ಮತ್ತು ಹೋರಾಟಗಾರರ ಕುರಿತ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿರುವ ಅಥಣಿಯ ಜೆ.ಪಿ. ದೊಡಮನಿ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿಯು ತಲಾ 50 ಸಾವಿರ ರೂ. ನಗದು ಹಾಗೂ ಫಲಕ ಒಳಗೊಂಡಿದೆ.