ಅರಕಲಗೂಡು: ತಾಲೂಕಿನ ರಾಮನಾಥಪುರ ಹೋಬಳಿಯ ವಡ್ಡರಹಳ್ಳಿ ಸೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಣಿಸಿಕೊಂಡು ಕೆಲವು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ ಮಂಗಳವಾರ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.
ವಡ್ಡರಹಳ್ಳಿ, ರುದ್ರಪಟ್ಟಣ, ಹನ್ಯಾಳು, ಮತ್ತಿಗೋಡು, ಜೆ.ಹೊಸಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆ ಸಂಚಾರ ಕಂಡುಬಂದಿತ್ತು. ಇತ್ತೀಚೆಗೆ ವಡ್ಡರಹಳ್ಳಿ ಸಮೀಪ ಚಿರತೆ ಕಾಣಿಸಿಕೊಂಡಿದ್ದರಿಂದ ಗ್ರಾಮಸ್ಥರು ಆತಂಕಗೊಂಡಿದ್ದರು.
ಚಿರತೆ ಕಾಣಿಸಿಕೊಂಡಿರುವ ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಈ ವೇಳೆ ವಡ್ಡರಹಳ್ಳಿ ಗ್ರಾಮದಲ್ಲಿ ಚಿರತೆ ನಾಯಿಯನ್ನು ಬಲಿ ಪಡೆದಿತ್ತು. ಅಲ್ಲದೆ ಕೆಎಸ್‌ಆರ್‌ಟಿಸಿ ಬಸ್‌ಗೂ ಅಡ್ಡಬಂದಿತ್ತು.
ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮುಂಜಾಗ್ರತಾ ಕ್ರಮವಾಗಿ ಬೋನು ಇರಿಸಿದ್ದರು. ಚಿರತೆ ಸೆರೆ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
ಸೆರೆಯಾಗಿರುವ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲಿಸಿ, ಆರೋಗ್ಯ ಸ್ಥಿತಿ ಸೇರಿದಂತೆ ಅಗತ್ಯ ಮಾಹಿತಿಯನ್ನು ದಾಖಲಿಸಿಕೊಂಡು, ನಿಯಮಾನುಸಾರ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಿದರು.
ಚಿರತೆ ಸೆರೆ ಸಿಕ್ಕಿದ್ದರೂ ಗ್ರಾಮಸ್ಥರು ಮುಂಜಾಗ್ರತೆ ವಹಿಸಬೇಕು. ವಿಶೇಷವಾಗಿ ಮುಂಜಾನೆ ಹಾಗೂ ರಾತ್ರಿ ವೇಳೆ ಒಂಟಿಯಾಗಿ ಸಂಚರಿಸದಂತೆ, ಜಾನುವಾರುಗಳನ್ನು ಸುರಕ್ಷಿತ ಸ್ಥಳದಲ್ಲಿ ಕಟ್ಟಿಹಾಕುವಂತೆ ಹಾಗೂ ಚಿರತೆ ಅಥವಾ ಇತರೆ ಕಾಡುಪ್ರಾಣಿಗಳ ಚಲನವಲನ ಕಂಡುಬಂದರೆ ತಕ್ಷಣ ಮಾಹಿತಿ ನೀಡಬೇಕು ಎಂದು ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮಸ್ಥರಿಗೆ ಮನವಿ ಮಾಡಿದರು.