ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಗೌರವಿಸಲಿ

ಬೇಲೂರಿನ ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಎಚ್.ಕೆ.ಸುರೇಶ್ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.
ಬೇಲೂರಿನ ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಎಚ್.ಕೆ.ಸುರೇಶ್ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎಚ್.ಕೆ.ಸುರೇಶ್
  • ತಾಲೂಕು ಕಚೇರಿ ಸಭಾಂಗಣ
ಬೇಲೂರು: ವಿಶ್ವದ ಶ್ರೇಷ್ಠ ಸಂವಿಧಾನಗಳಲ್ಲಿ ಭಾರತದ ಸಂವಿಧಾನ ಪ್ರಮುಖವಾಗಿದ್ದು, ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಗೌರವಿಸಿ, ಅದರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಎಲ್ಲರ ಕರ್ತವ್ಯ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಆಶಯಗಳನ್ನು ರಕ್ಷಿಸುವುದು, ಅದರ ಆದರ್ಶಗಳನ್ನು ಪಾಲಿಸುವುದು ಹಾಗೂ ಪ್ರಸ್ತುತ ವಾಸ್ತವಿಕತೆಯನ್ನು ಸೂಕ್ಷ್ಮವಾಗಿ ಗಮನಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸರ್ಕಾರ ಪ್ರಜಾಪ್ರಭುತ್ವ ದಿನವನ್ನು ಆಚರಿಸುತ್ತಿದೆ ಎಂದರು.
ಪ್ರತಿಯೊಬ್ಬರೂ ಸಂವಿಧಾನದ ಆಶೋತ್ತರಗಳನ್ನು ಗೌರವಿಸುವ ಜತೆಗೆ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡಲು ಮುಂದಾಗಬೇಕು. ಪ್ರಜಾಪ್ರಭುತ್ವವವು ಜನರ ಅಭಿಪ್ರಾಯ, ಸಮಾನತೆ, ಸ್ವಾತಂತ್ರೃ, ನ್ಯಾಯ ಮತ್ತು ಮಾನವ ಹಕ್ಕುಗಳ ಮೇಲೆ ಆಧಾರಿತವಾಗಿದೆ. ಪ್ರತಿಯೊಬ್ಬ ನಾಗರಿಕ ತನ್ನ ಹಕ್ಕುಗಳ ಜತೆಗೆ ಕರ್ತವ್ಯಗಳನ್ನೂ ಅರಿತು ಕೊಳ್ಳಬೇಕು. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ, ಕಾನೂನಿನ ಗೌರವ ಮತ್ತು ಸಾಮಾಜಿಕ ಸಾಮರಸ್ಯವನ್ನು ಬಲಪಡಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು.
ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಮಾತನಾಡಿ, ಪ್ರಜಾಪ್ರಭುತ್ವ ದಿನವನ್ನು ಪ್ರತಿ ವರ್ಷ ಸೆ.15ರಂದು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು 2007ರಲ್ಲಿ ಈ ದಿನವನ್ನು ಅಧಿಕೃತವಾಗಿ ಘೋಷಿಸಿತು. ಪ್ರಜಾಪ್ರಭುತ್ವದ ಮಹತ್ವ, ಮಾನವ ಹಕ್ಕುಗಳು, ಸಮಾನತೆ, ಸ್ವಾತಂತ್ರ್ಯ, ಜನರ ಪಾಲ್ಗೊಳ್ಳುವಿಕೆ ಹಾಗೂ ಕಾನೂನಿನ ಆಳ್ವಿಕೆಯ ಕುರಿತು ಜಾಗೃತಿ ಮೂಡಿಸುವುದು ಇದರ ಪ್ರಮುಖ ಉದ್ದೇಶ ಎಂದು ತಿಳಿಸಿದರು.
ಪ್ರಜಾಪ್ರಭುತ್ವ ಎಂದರೆ ಕೇವಲ ಚುನಾವಣೆ ನಡೆಸುವುದಷ್ಟೇ ಅಲ್ಲ. ಬದಲಾಗಿ ಪ್ರತಿಯೊಬ್ಬ ನಾಗರಿಕ ತನ್ನ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರೃ, ಸಮಾನ ಅವಕಾಶ, ಹಕ್ಕುಗಳ ರಕ್ಷಣೆ ಮತ್ತು ಆಡಳಿತದಲ್ಲಿ ಪಾಲ್ಗೊಳ್ಳುವ ಅವಕಾಶ ಪ್ರಜಾಪ್ರಭುತ್ವದ ಮೂಲ ಆಶಯವಾಗಿದೆ. ಜನರೇ ಪ್ರಜಾಪ್ರಭುತ್ವದ ಕೇಂದ್ರ ಬಿಂದು. ಪ್ರತಿಯೊಬ್ಬರಿಗೂ ಸಮಾನ ಹಕ್ಕು ಮತ್ತು ಅವಕಾಶ, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ, ಅಭಿವ್ಯಕ್ತಿ ಸ್ವಾತಂತ್ರ್ಯ, ಮಾನವ ಹಕ್ಕುಗಳ ರಕ್ಷಣೆ ಮತ್ತು ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬುದು ಪ್ರಜಾಪ್ರಭುತ್ವದ ಪ್ರಮುಖ ಆಶಯಗಳಾಗಿವೆ ಎಂದರು.
ಸಮಾಜ ಕಲ್ಯಾಣ ಇಲಾಖೆ ಗ್ರೇಡ್-1 ಸಹಾಯಕ ನಿರ್ದೇಶಕ ಲಿಂಗರಾಜು, ಪೊಲೀಸ್ ಇನ್‌ಸ್ಪೆಕ್ಟರ್ ರೇವಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಪುರಸಭೆ ಮುಖ್ಯಾಧಿಕಾರಿ ಬಸವರಾಜ್ ಶಿಗ್ಗಾವಿ, ಕಸಾಪ ಅಧ್ಯಕ್ಷ ಮಾ.ನ.ಮಂಜೇಗೌಡ, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಲೋಹಿತ್, ಸಾಮಾಜಿಕ ಅರಣ್ಯಾಧಿಕಾರಿ ಶೈಲಾ, ಬಿಆರ್‌ಸಿ ಶಿವಮರಿಯಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net