ರಾಷ್ಟ್ರದ ಸಮಗ್ರತೆಯನ್ನು ಎಲ್ಲರೂ ಗೌರವಿಸಲಿ

ಚನ್ನರಾಯಪಟ್ಟಣದಲ್ಲಿ ಆಯೋಜಿಸಿದ್ದ ಪ್ರಜಾಪ್ರಭುತ್ವ ದಿನಾಚರಣೆ ಕಾಯಕ್ರಮದಲ್ಲಿ ಶಾಸಕ ಸಿ.ಎನ್. ಬಾಲಕೃಷ್ಣ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಜಿ.ಆರ್.ಹರೀಶ್, ಡಿ.ಆರ್. ತ್ಯಾಗರಾಜ್, ಮೋಹನ್, ಪವನ್, ಅನಿಲ್ ಕುಮಾರ್, ಎಂ.ಕೆ.ಮಂಜುನಾಥ್, ರತ್ನಕಾರ್, ಶಿವಕುಮಾರ್ ಇತರರು ಇದ್ದರು.
ಚನ್ನರಾಯಪಟ್ಟಣದಲ್ಲಿ ಆಯೋಜಿಸಿದ್ದ ಪ್ರಜಾಪ್ರಭುತ್ವ ದಿನಾಚರಣೆ ಕಾಯಕ್ರಮದಲ್ಲಿ ಶಾಸಕ ಸಿ.ಎನ್. ಬಾಲಕೃಷ್ಣ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಜಿ.ಆರ್.ಹರೀಶ್, ಡಿ.ಆರ್. ತ್ಯಾಗರಾಜ್, ಮೋಹನ್, ಪವನ್, ಅನಿಲ್ ಕುಮಾರ್, ಎಂ.ಕೆ.ಮಂಜುನಾಥ್, ರತ್ನಕಾರ್, ಶಿವಕುಮಾರ್ ಇತರರು ಇದ್ದರು.
Published on
ಚನ್ನರಾಯಪಟ್ಟಣ: ಅಖಂಡ ಭಾರತದ ಪರಿಕಲ್ಪನೆ ಹಾಗೂ ರಾಷ್ಟ್ರೀಯ ಏಕತೆಯ ಹಿನ್ನೆಲೆಯಲ್ಲಿ, ದೇಶದ ನೆಲದಲ್ಲಿ ಬೇರೆ ದೇಶಗಳ ಧ್ವಜಗಳನ್ನು ಹಾರಿಸುವಂತಹ ಕೃತ್ಯಗಳನ್ನು ಸಾರ್ವಜನಿಕರು ಖಂಡಿಸಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು.

ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ವಕೀಲರ ಸಂಘದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ದೇಶದ ಸಾರ್ವಭೌಮತೆ, ರಾಷ್ಟ್ರೀಯ ಏಕತೆ ಮತ್ತು ಸಮಗ್ರತೆಯನ್ನು ಪ್ರತಿಯೊಬ್ಬರೂ ಗೌರವಿಸಬೇಕು. ಯಾವುದೇ ಸಂದರ್ಭದಲ್ಲೂ ದೇಶದ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ನಡೆಗಳನ್ನು ಪ್ರೋತ್ಸಾಹಿಸಬಾರದು. ಭಾರತದ ವೈವಿಧ್ಯತೆಯಲ್ಲಿ ಏಕತೆ ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ದೇಶದ ಕಾನೂನು, ಸಂವಿಧಾನ ಮತ್ತು ರಾಷ್ಟ್ರೀಯ ಚಿಹ್ನೆಗಳಿಗೆ ಗೌರವ ನೀಡುವ ಮೂಲಕ ಶಾಂತಿ ಮತ್ತು ಸೌಹಾರ್ದತೆ ಕಾಪಾಡಬೇಕು. ರಾಷ್ಟ್ರದ ಏಕತೆ ಮತ್ತು ಸಮಗ್ರತೆ ಬಲಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಜಾಗೃತರಾಗಿ, ಯಾವುದೇ ಪ್ರಚೋದನಾತ್ಮಕ ಚಟುವಟಿಕೆಗಳಿಗೆ ಅವಕಾಶ ನೀಡದೆ ಕಾನೂನುಬದ್ಧವಾಗಿ ನಡೆದುಕೊಳ್ಳಬೇಕು ಎಂದರು.
ಎಸ್‌ಐಆರ್ ಆತಂಕ ಅಗತ್ಯವಿಲ್ಲ: ಎಸ್‌ಐಆರ್ ಪ್ರಕ್ರಿಯೆಯಡಿ ನೋಟಿಸ್ ಬಂದಿರುವುದಕ್ಕೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ನೋಟಿಸ್‌ಗೆ ಸಂಬಂಧಿಸಿದಂತೆ ಅಗತ್ಯವಿರುವ ಸೂಕ್ತ ದಾಖಲೆ ಸಲ್ಲಿಸುವ ಮೂಲಕ ಸರಿಪಡಿಸಿಕೊಳ್ಳಬಹುದು ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೊರಾರ್ಜಿ ಅಲ್ಪಸಂಖ್ಯಾತರ ಪಿಯು ಕಾಲೇಜು ಉಪನ್ಯಾಸಕ ರತ್ನಾಕರ್ ಮಾತನಾಡಿ, ದೇಶದ ಸಂವಿಧಾನವು ಪ್ರತಿಯೊಬ್ಬ ನಾಗರಿಕನ ಹಕ್ಕು, ಸ್ವಾತಂತ್ರ್ಯ, ಸಮಾನತೆ ಹಾಗೂ ಕರ್ತವ್ಯಗಳಿಗೆ ಮಾರ್ಗದರ್ಶಿಯಾಗಿದೆ. ಸಂವಿಧಾನದ ಆಶಯಗಳನ್ನು ಅರ್ಥೈಸಿಕೊಂಡು, ಪ್ರಜಾಪ್ರಭುತ್ವದ ಬಗ್ಗೆ ಪ್ರತಿಯೊಬ್ಬರೂ ಅರಿಯಬೇಕಿದೆ ಎಂದರು.
ಮತದಾನದ ಹಕ್ಕನ್ನು ಸಮರ್ಥವಾಗಿ ಬಳಸಿಕೊಳ್ಳುವುದು, ಕಾನೂನು ಮತ್ತು ಸಂವಿಧಾನವನ್ನು ಗೌರವಿಸುವುದು ಹಾಗೂ ಸಾಮಾಜಿಕ ಸಾಮರಸ್ಯ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಯುವಜನರಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಹೆಚ್ಚಿನ ಜಾಗೃತಿ ಅಗತ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ವಾಚಿಸಲಾಯಿತು. ತಾಪಂ ಇಒ ಜಿ.ಆರ್.ಹರೀಶ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ಅನಿಲ್ ಕುಮಾರ್, ನಗರ ಠಾಣೆ ಪೊಲೀಸ್ ಉಪ ನಿರೀಕ್ಷಕ ಮಲ್ಲಪ್ಪ, ರಾಜ್ಯ ರೈತ ಸಂಘದ ಅಧ್ಯಕ್ಷ ಅರಳಾಪುರ ಮಂಜೇಗೌಡ, ಶಿರಸ್ತೇದಾರ್ ಪವನ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಡಿ.ಆರ್.ತ್ಯಾಗರಾಜು, ಕಚೇರಿ ಅಧೀಕ್ಷಕ ಮೋಹನ್, ಉಪನ್ಯಾಸಕ ಶಿವಕುಮಾರ್, ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಂ.ಕೆ.ಮಂಜುನಾಥ್, ಶೈಕ್ಷಣಿಕ ಸಂಯೋಜಕ ಲೋಕೇಶ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net