ಕನ್ನಡ ಹೊಸ ತಂತ್ರಜ್ಞಾನದ ಭಾಷೆಯಾಗಲಿ: ಸಿಎಂ ಸಿದ್ದರಾಮಯ್ಯ

70ನೇ ಕನ್ನಡ ರಾಜ್ಯೋತ್ಸವ
70ನೇ ಕನ್ನಡ ರಾಜ್ಯೋತ್ಸವ
Published on

ಪ್ರಮುಖ ಮುಖ್ಯಾಂಶಗಳು

  • ಆಧುನಿಕ ತಂತ್ರಜ್ಞಾನದಲ್ಲಿ ಕೃತಕ ಬುದ್ಧಿಮತ್ತೆ
  • ಕನ್ನಡ ಭಾಷೆ, ಪರಂಪರೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸುವ ಕಾರ್ಯ
  • ಈ ನಿಟ್ಟಿನಲ್ಲಿ ಹೊಸ ನೀತಿಯನ್ನು ತರಲು ಸರ್ಕಾರ ಪ್ರಯತ್ನ
ಬೆಂಗಳೂರು: ಆಧುನಿಕ ತಂತ್ರಜ್ಞಾನದಲ್ಲಿ ಬಹಳ ಮುಂಚೂಣಿಯಲ್ಲಿರುವ ಕೃತಕ ಬುದ್ಧಿಮತ್ತೆಯಿಂದ (ಎಐ) ಉದ್ಯೋಗ ನಷ್ಟವಾಗದಂತೆ ಕನ್ನಡ ಭಾಷೆಯನ್ನು ಹೊಸ ಸವಾಲುಗಳಿಗೆ ಸಿದ್ಧಪಡಿಸಲು ಸರ್ಕಾರವು ಬದ್ಧವಾಗಿದೆ. ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಂತ್ರಜ್ಞರು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ 70ನೇ ಕನ್ನಡ ರಾಜ್ಯೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಎಐನಿಂದ ಉದ್ಯೋಗ ನಷ್ಟವಾಗಬಹುದು ಎಂಬ ಆತಂಕ ಎದುರಾಗಿದೆ. ಕನ್ನಡ ಭಾಷೆ, ಪರಂಪರೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ. ಈ ನಿಟ್ಟಿನಲ್ಲಿ ಹೊಸ ನೀತಿಯನ್ನು ತರಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.

180 ಮದರಸಾಗಳಲ್ಲಿ ಕನ್ನಡ ಕಲಿಕೆ

ರಾಜ್ಯದಲ್ಲಿ ಶಾಲಾ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಸಲುವಾಗಿ 800 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (ಕೆಪಿಎಸ್) ಪರಿವರ್ತಿಸಲಾಗುತ್ತಿದೆ. ಹಾಗೆಯೇ ಪ್ರಾಥಮಿಕ ಹಂತದ ಕನ್ನಡ ಕಲಿಸಲು ಪ್ರಸ್ತುತ ವರ್ಷದಲ್ಲಿ 180 ಮದರಸಾಗಳಲ್ಲಿ ಕನ್ನಡ ಕಲಿಸಲಾಗುತ್ತಿದೆ. ಇದನ್ನು ರಾಜ್ಯದಲ್ಲಿರುವ 1,500 ಮದರಸಾಗಳಿಗೆ ವಿಸ್ತರಿಸಲಾಗುವುದು. ಇದಕ್ಕಾಗಿ ರೂ.483 ಕೋಟಿ ವೆಚ್ಚದಲ್ಲಿ 100 ಉರ್ದು ಶಾಲೆಗಳನ್ನು ಕೆಪಿಎಸ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಕನ್ನಡ ನಿರ್ಲಕ್ಷ್ಯದಿಂದ ಹಲವು ಬಿಕ್ಕಟ್ಟು

ಶಿಕ್ಷಣದಲ್ಲಿ ಕನ್ನಡದ ನಿರ್ಲಕ್ಷ್ಯದಿಂದ ಹಲವು ಸಮಸ್ಯೆಗಳನ್ನು ಹುಟ್ಟುಹಾಕಿದೆ. ಜಗತ್ತಿನ ಮುಂದುವರಿದ ಭಾಷೆಗಳಿಗೆ ಇಲ್ಲದ ಬಿಕ್ಕಟ್ಟು ಕನ್ನಡಕ್ಕೆ ಬಂದೊಂದಗಿದೆ. ಮುಂದುವರಿದ ದೇಶಗಳ ಮಕ್ಕಳು ತಮ್ಮ ತಾಯಿ ಭಾಷೆಯಲ್ಲಿಯೇ ಕಲಿಯುತ್ತಾರೆ ಮತ್ತು ಯೋಚಿಸುತ್ತಾರೆ. ಆದರೆ, ನಮ್ಮಲ್ಲಿ ತದ್ವಿರುದ್ಧವಾಗಿದೆ. ಇಂಗ್ಲಿಷ್ ಮತ್ತು ಹಿಂದಿಯಂತಹ ಭಾಷೆಗಳು ಭಾಷಾ ಕಾರಣದಿಂದ ನಮ್ಮ ಮಕ್ಕಳ ಪ್ರತಿಭೆಯನ್ನು ದುರ್ಬಲಗೊಳಿಸುತ್ತಿವೆ. ಹೀಗಾಗಿ, ಮಾತೃಭಾಷೆಯಲ್ಲಿಯೇ ಶಿಕ್ಷಣ ನೀಡಲು ಸೂಕ್ತವಾದ ಕಾನೂನುಗಳನ್ನು ಜಾರಿಗೊಳಿಸುವ ಅಗತ್ಯವಿದೆ. ಈ ಕುರಿತು ಕೇಂದ್ರ ಸರ್ಕಾರ ಗಮನ ಹರಿಸುವಂತೆ ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ರಿಜ್ವಾನ್ ಅರ್ಹದ್,
ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಮತ್ತು ಆಯುಕ್ತ ವಿಕಾಶ್ ಕಿಶೋರ್ ಸೂರಲ್ಕರ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net