ಬೂತ್‌ಮಟ್ಟದಿಂದಲೇ ಪಕ್ಷ ಬಲಪಡಿಸುವ ಕೆಲಸವಾಗಲಿ

ಹೊಳೆನರಸೀಪುರ ಪಟ್ಟಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಹೊಳೆನರಸೀಪುರ ಪಟ್ಟಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎಚ್.ಡಿ.ರೇವಣ್ಣ
  • ಚೆನ್ನಾಂಬಿಕ ಕನ್ವೆನ್ಷನ್ ಹಾಲ್‌
ಹೊಳೆನರಸೀಪುರ: ರಾಜಕೀಯದಲ್ಲಿ ಎದುರಾಗುವ ಸವಾಲುಗಳಿಗೆ ಅಂಜದೆ ಪಕ್ಷವನ್ನು ಬೂತ್‌ಮಟ್ಟದಿಂದಲೇ ಬಲಪಡಿಸುವ ಜವಾಬ್ದಾರಿಯನ್ನು ಕಾರ್ಯಕರ್ತರು ವಹಿಸಿಕೊಳ್ಳಬೇಕು ಎಂದು ಶಾಸಕ ಎಚ್.ಡಿ.ರೇವಣ್ಣ ಸಲಹೆ ನೀಡಿದರು.
ತಾಲೂಕಿನ ಚೆನ್ನಾಂಬಿಕ ಕನ್ವೆನ್ಷನ್ ಹಾಲ್‌ನಲ್ಲಿ ಸೋಮವಾರ ಜೆಡಿಎಸ್ ಕಾರ್ಯಕರ್ತರಿಗೆ ಪಕ್ಷದ ವತಿಯಿಂದ ಆಯೋಜಿಸಿದ್ದ ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ಕುರಿತ ಸಭೆಯಲ್ಲಿ ಮಾತನಾಡಿದರು. ಮತದಾರರ ಪಟ್ಟಿಯಲ್ಲಿ ಯಾವುದೇ ದೋಷಗಳಿಲ್ಲದಂತೆ ನೋಡಿಕೊಳ್ಳಬೇಕು. ಪ್ರತಿ ಬೂತ್ ಮಟ್ಟದಲ್ಲಿಯೂ ಮತದಾರರ ಪಟ್ಟಿಯನ್ನು ಪರಿಶೀಲಿಸಿ, ನಿಖರ ಮಾಹಿತಿ ಇರುವಂತೆ ನೋಡಿಕೊಳ್ಳುವುದು ಕಾರ್ಯಕರ್ತರ ಜವಾಬ್ದಾರಿ ಎಂದು ಹೇಳಿದರು.
ಕ್ಷೇತ್ರದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿ, ನಿರ್ಮಿಸಲಾದ ಶಾಲೆ-ಕಾಲೇಜುಗಳು ಮತ್ತು ಇತರ ಮೂಲಸೌಕರ್ಯಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಪಕ್ಷಕ್ಕಾಗಿ ದುಡಿಯುವ ಕಾರ್ಯಕರ್ತರನ್ನು ಪಕ್ಷ ಎಂದಿಗೂ ಕೈಬಿಡುವುದಿಲ್ಲ. ತಾಲೂಕಿನಲ್ಲಿ ಸುಮಾರು 25,000 ಜನ ಕೆಲಸ ಮಾಡುವ ಒಂದು ಫ್ಯಾಕ್ಟರಿ ಮಾಡುವ ಆಸೆ ಇದ್ದು, ಮುಂದಿನ ದಿನಗಳಲ್ಲಿ ಅದನ್ನು ಮಾಡಲಾಗುವುದು ಎಂದರು.
ಶಾಸಕ ಎ.ಮಂಜು ಮಾತನಾಡಿ, ಮುಂಬರುವ ಎಲ್ಲ ಚುನಾವಣೆಗಳಲ್ಲೂ ಜೆಡಿಎಸ್ ಗೆಲುವಿಗಾಗಿ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು. ಆ ಮೂಲಕ ಪಕ್ಷದ ಸಂಘಟನೆಗೆ ಒತ್ತು ಕೊಡಬೇಕು. ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ಕೆಲಸವನ್ನು ತಕ್ಷಣವೇ ಪ್ರಾರಂಭಿಸಬೇಕು ಎಂದು ನಿರ್ದೇಶನ ನೀಡಿದರಲ್ಲದೆ, ಪಕ್ಷದ ಹಿರಿಯ ನಾಯಕ ಎಚ್.ಡಿ.ರೇವಣ್ಣ ಅವರ ಮಾರ್ಗದರ್ಶನದಲ್ಲಿ ಸಾಗುವ ಅವಶ್ಯಕತೆ ಇದೆ ಎಂದು ಪ್ರತಿಪಾದಿಸಿದರು.
ಆಧಾರ ಕಾರ್ಡ್ ಲಿಂಕ್ ಮಾಡುವಂತೆ ಮತದಾರರ ಪಟ್ಟಿಯನ್ನು ಅಪ್‌ಡೇಟ್ ಮಾಡುವುದೂ ಪ್ರಮುಖ ಜವಾಬ್ದಾರಿಯಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಎಲ್ಲರೂ ಎಸ್‌ಐಆರ್ ಯಶಸ್ಸಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.
ನಾನು ವಿವಿಧ ಪಕ್ಷಗಳಲ್ಲಿ ಕಾರ್ಯ ನಿರ್ವಹಿಸಿದ್ದರೂ, ಪ್ರಸ್ತುತ ಜೆಡಿಎಸ್‌ನಲ್ಲಿ ಕೆಲಸ ಮಾಡುತ್ತಿರುವುದು ಹೆಚ್ಚು ಆತ್ಮತೃಪ್ತಿ ತಂದಿದೆ ಎಂದರು.
ಸ್ಥಳೀಯ ಮುಖಂಡ ದೇವರಾಜು ಮಾತನಾಡಿ, ಮತದಾರರ ಪಟ್ಟಿಯಲ್ಲಿ ಯಾವುದೇ ದೋಷವಿಲ್ಲದಂತೆ ಸರಿಯಾದ ಮಾಹಿತಿ ನಮೂದಿಸುವ ಅವಶ್ಯಕತೆಯಿದೆ. ವಿರೋಧ ಪಕ್ಷದವರು ಮತದಾರರ ಪಟ್ಟಿಯನ್ನು ಅಪ್‌ಡೇಟ್ ಮಾಡಲು ಕಾಯುತ್ತಿದ್ದಾರೆ. ಅಲ್ಲದೆ ಸಾರ್ವಜನಿಕರಿಗೆ ಸರ್ಕಾರದ ಸೌಲಭ್ಯಗಳು ಸಿಗಬೇಕಾದರೆ ಮತದಾರರ ಪಟ್ಟಿಯಲ್ಲಿನ ಮಾಹಿತಿ ನಿಖರವಾಗಿರಬೇಕು ಎಂದು ತಿಳಿಸಿದರು.
ಪಕ್ಷದ ಕಾರ್ಯಕರ್ತರು ಎಚ್ಚರಿಕೆಯಿಂದಿದ್ದು, ಮತದಾರರ ಪಟ್ಟಿಯನ್ನು ಸರಿಯಾಗಿ ಪರಿಶೀಲಿಸುವ ಮೂಲಕ ಪಕ್ಷದ ಸಂಘಟನೆಯನ್ನು ಬಲಪಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರಾದ ಪುಟ್ಟಸೋಮಪ್ಪ, ಚಂದ್ರಶೇಖರ್, ಎಚ್.ಎನ್.ದೇವೇಗೌಡ, ಅನಂತಕುಮಾರ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net