ಸ್ವಾತಂತ್ರೃ ದಿನ ಯಶಸ್ಸಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ

ಅರಕಲಗೂಡಿನಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಶಾಸಕ ಎ. ಮಂಜು ಮಾತನಾಡಿದರು. ಕೆ.ಸಿ.ಸೌಮ್ಯಾ, ನಾಗೇಂದ್ರ ಕುಮಾರ್ ಇತರರಿದ್ದರು.
ಅರಕಲಗೂಡಿನಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಶಾಸಕ ಎ. ಮಂಜು ಮಾತನಾಡಿದರು. ಕೆ.ಸಿ.ಸೌಮ್ಯಾ, ನಾಗೇಂದ್ರ ಕುಮಾರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎ.ಮಂಜು
  • ಸ್ವಾತಂತ್ರೃ ದಿನವನ್ನು ಅತ್ಯಂತ ಅಚ್ಚುಕಟ್ಟಾಗಿ ಮತ್ತು ಅರ್ಥಪೂರ್ಣ

ಅರಕಲಗೂಡು: ಪಟ್ಟಣದಲ್ಲಿ ಸ್ವಾತಂತ್ರೃ ದಿನವನ್ನು ಅತ್ಯಂತ ಅಚ್ಚುಕಟ್ಟಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಶಾಸಕ ಎ.ಮಂಜು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಇತ್ತೀಚಿಗೆ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಎಲ್ಲ ಇಲಾಖೆಗಳ ಅಧಿಕಾರಿಗಳ ಸಕ್ರಿಯ ಪಾಲ್ಗೊಳ್ಳುವಿಕೆಯೊಂದಿಗೆ ಈ ಬಾರಿಯ ಸಮಾರಂಭವನ್ನು ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಆ.15ರಂದು ಬೆಳಗ್ಗೆ 8ಕ್ಕೆ ತಾಲೂಕು ಕಚೇರಿ ಆವರಣದಿಂದ ಸ್ತಬ್ಧಚಿತ್ರಗಳು ಹಾಗೂ ಶಾಲಾ ಮಕ್ಕಳನ್ನೊಳಗೊಂಡ ಆಕರ್ಷಕ ಮೆರವಣಿಗೆ ಹೊರಟು ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. 9ಕ್ಕೆ ಸಭಾ ಕಾರ್ಯಕ್ರಮ ನಡೆಯುವ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನವನ್ನು ತಲುಪಬೇಕು. ಕಾರ್ಯಕ್ರಮವನ್ನು ಗರಿಷ್ಠ ಎರಡು ಅಥವಾ ಎರಡೂವರೆ ಗಂಟೆಗಳ ಒಳಗೆ ಮುಕ್ತಾಯಗೊಳಿಸುವಂತೆ ಸೂಚಿಸಲಾಯಿತು.
ರಾಷ್ಟ್ರೀಯ ಹಬ್ಬ ಆಚರಣೆಯಲ್ಲಿ ಎಲ್ಲ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು. ಕೇವಲ ಇದು ಸರ್ಕಾರಿ ಕಾರ್ಯಕ್ರಮವಾಗದೆ ಸಾರ್ವಜನಿಕರ ಹಬ್ಬದಂತೆ ನಡೆಸಬೇಕು. ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರದ ಸಾಧಕರನ್ನು ಗೌರವಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ತಹಸೀಲ್ದಾರ್ ಕೆ.ಸಿ.ಸೌಮ್ಯಾ, ಪಪಂ ಮುಖ್ಯಾಧಿಕಾರಿ ನಾಗೇಂದ್ರ ಕುಮಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net