ಕೊಳ್ಳೇಗಾಲ: ಪಟ್ಟಣದಲ್ಲಿ ಭಾನುವಾರ ವಿಶ್ವಚೇತನ ಸಮೂಹ ವಿದ್ಯಾ ಸಂಸ್ಥೆಗಳ ಅಂಗ ಸಂಸ್ಥೆ ಶಿವ ವಿದ್ಯಾ ಕೇಂದ್ರದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಹಾಗೂ ವಿಶ್ವ ಚೇತನ ಪಿಯು ಕಾಲೇಜಿನ ಪ್ರಥಮ ಪಿಯು ಮತ್ತು ಸ್ವಾಮಿ ವಿವೇಕಾನಂದ ಐಟಿಐ ಕೈಗಾರಿಕಾ ಸಂಸ್ಥೆಯ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಗುರುಭವನದಲ್ಲಿ ಆಯೋಜಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಹಿರಿಯ ವಕೀಲ ವೆಂಕಟಾಚಲ ಮಾತನಾಡಿ, ಮಕ್ಕಳ ವಿದ್ಯಾಭ್ಯಾಸಕ್ಕೆ ಪಾಲಕರು ಹೆಚ್ಚಿನ ಒತ್ತು ನೀಡಬೇಕು. ವಿದ್ಯಾರ್ಥಿ ಜೀವನ ಬಹಳ ಅಮೂಲ್ಯವಾದದ್ದು, ಮಕ್ಕಳು ಈ ಸಮಯವನ್ನು ಸದುಪಯೋಗ ಮಾಡಿಕೊಂಡು ಜೀವನದಲ್ಲಿ ಸಾಧನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆ ಸಂಸ್ಥಾಪಕ ಕಾರ್ಯದರ್ಶಿ ಪ್ರೇಮಲತಾ ಕೃಷ್ಣಸ್ವಾಮಿ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣದ ಅಗತ್ಯತೆ ಹೆಚ್ಚಿದೆ. ವಿದ್ಯಾರ್ಥಿಗಳು ಮುಂಬರುವ ಪರೀಕ್ಷೆಗಳಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಸಂಸ್ಥೆಗೆ ಮತ್ತು ಪೋಷಕರಿಗೆ ಕೀರ್ತಿ ತಂದುಕೊಡಬೇಕು ಎಂದರು.
ಸಂಸ್ಥೆ ಸಂಯೋಜಕ ಜಗದೀಶ್, ರಾಜೇಶ್, ಉಷಾ ವೆಂಕಟಾಚಲ, ಸಂಸ್ಥೆ ವ್ಯವಸ್ಥಾಪಕ ರವೀಂದ್ರ, ಪ್ರಭಾರ ಪ್ರಾಂಶುಪಾಲ ಭಾಸ್ಕರ್, ಪ್ರೌಢಶಾಲೆ ಮುಖ್ಯಶಿಕ್ಷಕಿ ಕವಿತಾ ಇತರರು ಇದ್ದರು.