ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಹೈಕಮಾಂಡ್​ ಜೊತೆ ಚರ್ಚೆ: ಅಮಿತ್ ಷಾ ಭೇಟಿ ನನ್ನ ಆತ್ಮವಿಶ್ವಾಸ ಹೆಚ್ಚಿಸಿದೆ ಎಂದ ವಿಜಯೇಂದ್ರ!

 ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
Published on: 
Summary
  • ಬರ ಪರಿಹಾರ ಘೋಷಿಸಿ ತಿಂಗಳುಗಳಾದರೂ ರೈತರಿಗೆ ಹಣ ಬಿಡುಗಡೆ ಮಾಡಿಲ್ಲ; ಅಧಿವೇಶನಕ್ಕೂ ಮುನ್ನ ಪರಿಹಾರ ನೀಡಲಿ

  • ಆಶಾ ಕಾರ್ಯಕರ್ತೆಯರಿಗೆ 15 ಸಾವಿರ ರೂ. ನೀಡಲು ಹಣವಿಲ್ಲ, ಆದರೆ ದುಂದುವೆಚ್ಚಕ್ಕೆ ಸರ್ಕಾರದ ಬಳಿ ಹಣವಿದೆ

  • ಸರ್ಕಾರದ ಬೆಲೆ ಏರಿಕೆ ವಿರುದ್ಧ ನವೆಂಬರ್ 23, 24, 25ರಂದು ರಾಜ್ಯಾದ್ಯಂತ ಬಿಜೆಪಿ ಹೋರಾಟ

  • ಅಮಿತ್ ಶಾ ಭೇಟಿ, ರಾಜ್ಯ ರಾಜಕೀಯ ಹಾಗೂ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ; ಭೇಟಿ ನನ್ನ ವಿಶ್ವಾಸ ಹೆಚ್ಚಿಸಿದೆ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಷಾರನ್ನು ಭೇಟಿ ಮಾಡಿ ರಾಜ್ಯದ ಪ್ರಸಕ್ತ ರಾಜಕೀಯ ಪರಿಸ್ಥಿತಿ, ಪರಿಷತ್ ಚುನಾವಣೆಯ ಫಲಿತಾಂಶ, ಹಿರಿಯೂರು ಕ್ಷೇತ್ರದ ಬೆಳವಣಿಗೆಗಳು ಹಾಗೂ ರಾಜ್ಯಾಧ್ಯಕ್ಷ ಸ್ಥಾನದ ವಿಚಾರವಾಗಿ ಸವಿಸ್ತಾರವಾಗಿ ಚರ್ಚಿಸಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿವೈವಿ, ಭೇಟಿಯ ಆಂತರಿಕ ವಿಚಾರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ, ಆದರೆ ಈ ಮಾತುಕತೆಯು ತಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಹೇಳಿದ್ದಾರೆ.

ಹಿರಿಯೂರು ಉಪಚುನಾವಣೆಯ ಕುರಿತು ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಉತ್ತಮ ಅವಕಾಶವಿದ್ದು, ಯಾವುದೇ ಗೊಂದಲವಿಲ್ಲದೆ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮೈತ್ರಿ ಪಕ್ಷವಾದ ಜೆಡಿಎಸ್ ಟಿಕೆಟ್ ಕೇಳುವುದು ಸಹಜವಾಗಿದ್ದು, ಅಂತಿಮವಾಗಿ ಪಕ್ಷದ ವರಿಷ್ಠರು ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ನಮಗೆ ಟಿಕೆಟ್ ವಿಚಾರದಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ, ಬದಲಾಗಿ ಚುನಾವಣೆಯಲ್ಲಿ ಗೆಲ್ಲುವುದೇ ನಮ್ಮ ಏಕೈಕ ಗುರಿ ಮತ್ತು ಹಠ. ರಾಜ್ಯದ ನಾಯಕರು ಹಾಗೂ ಕಾರ್ಯಕರ್ತರ ಅಭಿಪ್ರಾಯಗಳನ್ನು ಈಗಾಗಲೇ ಅಮಿತ್ ಷಾ ಅವರಿಗೆ ತಲುಪಿಸಲಾಗಿದ್ದು, ನಾಲ್ಕು ಗೋಡೆಗಳ ನಡುವೆ ಚರ್ಚಿಸಿ ವರಿಷ್ಠರು ಅಂತಿಮ ತೀರ್ಮಾನ ಪ್ರಕಟಿಸಲಿದ್ದಾರೆ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.

ಬರ ನಿರ್ವಹಣೆ ಮತ್ತು ರೈತರ ಆತ್ಮಹತ್ಯೆ ವಿಚಾರದಲ್ಲಿ ಸರ್ಕಾರಕ್ಕೆ ಎಚ್ಚರಿಕೆ

ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು, ವಾಲ್ಮೀಕಿ ನಿಗಮದ ಹಗರಣ ಹಾಗೂ ಬರ ನಿರ್ವಹಣೆಯಲ್ಲಿನ ನಿರ್ಲಕ್ಷ್ಯವನ್ನು ಖಂಡಿಸಿ ಬಿಜೆಪಿ ಬಳ್ಳಾರಿ ಪಾದಯಾತ್ರೆ ನಡೆಸಿತ್ತು. ನಮ್ಮ ಹೋರಾಟಕ್ಕೆ ಮಣಿದ ಸರ್ಕಾರ ವಿಶೇಷ ಅಧಿವೇಶನ ಕರೆದು ಬರಪೀಡಿತ ತಾಲೂಕುಗಳನ್ನು ಘೋಷಿಸಿತಾದರೂ, ರೈತರಿಗೆ ಪರಿಹಾರ ನೀಡುವ ವಿಚಾರದಲ್ಲಿ ಅವಮಾನಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿದೆ ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಘೋಷಿಸಿರುವ ಪರಿಹಾರದ ಮೊತ್ತವೇ ಅವೈಜ್ಞಾನಿಕವಾಗಿದ್ದು, ರೈತರ ಖಾತೆಗೆ ಕೇವಲ 400 ರಿಂದ 500 ರೂಪಾಯಿ ಜಮೆ ಮಾಡುತ್ತಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಇದು ನುಡಿದಂತೆ ನಡೆಯುವ ಸರ್ಕಾರವಲ್ಲ, ಬದಲಾಗಿ ರೈತರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಅವರು ಟೀಕಿಸಿದರು.

ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ತಮ್ಮ ಸ್ವಕ್ಷೇತ್ರದಲ್ಲೂ ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವಿಜಯೇಂದ್ರ ವಿಷಾದ ವ್ಯಕ್ತಪಡಿಸಿದರು. ಇಂತಹ ಸಂಕಷ್ಟದ ಸಮಯದಲ್ಲಿ ಪರಿಹಾರ ಬಿಡುಗಡೆ ಮಾಡಲು ಸರ್ಕಾರ ಷರತ್ತುಗಳನ್ನು ವಿಧಿಸುತ್ತಿರುವುದು ಸರಿಯಲ್ಲ. ತಕ್ಷಣವೇ ಎಲ್ಲಾ ಷರತ್ತುಗಳನ್ನು ಹಿಂಪಡೆದು, ಅಧಿವೇಶನ ಆರಂಭವಾಗುವುದಕ್ಕೂ ಮುನ್ನ ಘೋಷಿತ 5 ಸಾವಿರ ರೂಪಾಯಿ ಪರಿಹಾರವನ್ನು ರೈತರ ಖಾತೆಗೆ ಜಮೆ ಮಾಡಬೇಕು. ಇಲ್ಲದಿದ್ದರೆ ಮುಂಬರುವ ಅಧಿವೇಶನವನ್ನು ಹೇಗೆ ನಡೆಸುತ್ತೀರಿ ಎಂಬುದನ್ನು ನಾವು ನೋಡುತ್ತೇವೆ ಎಂದು ವಿಜಯೇಂದ್ರ ಸರ್ಕಾರಕ್ಕೆ ನೇರ ಎಚ್ಚರಿಕೆ ನೀಡಿದರು.

ಇದು ಘೋಷಣೆಗಳ ಸರ್ಕಾರ!

ಕರಾವಳಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್​ ಅವರು 32 ಸಾವಿರ ಕೋಟಿ ರೂಪಾಯಿಗಳ ಪ್ಯಾಕೇಜ್ ಘೋಷಿಸಿದ್ದರು. ಆದರೆ, ಘೋಷಣೆಯಾದ 24 ಗಂಟೆಯೊಳಗೆ ಆರ್ಥಿಕ ಇಲಾಖೆಯೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಈ ಯೋಜನೆಗಳ ಅನುಷ್ಠಾನ ಅಸಾಧ್ಯ ಎಂಬ ಸಂದೇಶ ರವಾನಿಸಿದೆ ಎಂದು ವಿಜಯೇಂದ್ರ ಆರೋಪಿಸಿದರು. ಈಗ ಹಿರಿಯೂರು ಕ್ಷೇತ್ರಕ್ಕೆ ಭೇಟಿ ನೀಡಿ 2,300 ಕೋಟಿ ರೂಪಾಯಿಗಳ ಯೋಜನೆಗಳನ್ನು ಘೋಷಿಸಿದ್ದಾರೆ. ರಾಜ್ಯದ ಜಿಎಸ್‌ಟಿ ಸಂಗ್ರಹದ ಗುರಿಯೂ ತಲುಪುವ ಸ್ಥಿತಿಯಲ್ಲಿಲ್ಲ, ಸುಮಾರು 25 ಸಾವಿರ ಕೋಟಿ ರೂಪಾಯಿಗಳ ರಾಜಸ್ವ ಕೊರತೆ ಎದುರಾಗಲಿದೆ. ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಸದ ಕಾರಣ ಅವರು ಕಾಮಗಾರಿ ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ರಾಜ್ಯ ಸರ್ಕಾರ ಸಾಲದ ಸುಳಿಗೆ ಸಿಲುಕಿದ್ದರೂ ಮುಖ್ಯಮಂತ್ರಿಗಳು ಕೇವಲ ಘೋಷಣೆಗಳ ಮೇಲೆ ಘೋಷಣೆ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಬಡವರ ನಿರ್ಲಕ್ಷ್ಯದ ಆರೋಪ!

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಚುನಾವಣೆಗೂ ಮುನ್ನ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಆಶಾ ಕಾರ್ಯಕರ್ತೆಯರಿಗೆ 15 ಸಾವಿರ ರೂಪಾಯಿ ಗೌರವಧನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ನಿನ್ನೆ ತಮ್ಮನ್ನು ಭೇಟಿಯಾದ ಕಾರ್ಯಕರ್ತೆಯರಿಗೆ ಮುಖ್ಯಮಂತ್ರಿಗಳು ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಪಾಠ ಹೇಳಿ ಕಳುಹಿಸಿದ್ದಾರೆ ಎಂದು ವಿಜಯೇಂದ್ರ ದೂರಿದರು. ಬರ ಪರಿಹಾರ, ಪಿಂಚಣಿ, ಕಬ್ಬು ಬೆಳೆಗಾರರಿಗೆ ನೆರವು ಹಾಗೂ ಬಡವರಿಗೆ ಮನೆ ನೀಡಲು ಸರ್ಕಾರದ ಬಳಿ ಹಣವಿಲ್ಲ. ತಾವು ಶಾಶ್ವತವಾಗಿ ಮುಖ್ಯಮಂತ್ರಿಯಾಗಿರುತ್ತೇವೆ ಎಂಬ ಭ್ರಮೆಯಲ್ಲಿ ಡಿ ಕೆ ಶಿವಕುಮಾರ್​ ಅವರು ಸರ್ಕಾರ ನಡೆಸುತ್ತಿದ್ದು, ಬಡವರ ಬಗ್ಗೆ ಅವರಿಗೆ ಯಾವುದೇ ಕಾಳಜಿ ಇಲ್ಲ ಎಂದು ಆರೋಪಿಸಿದರು.

ಕೆಕೆ ಗೆಸ್ಟ್ ಹೌಸ್ ನವೀಕರಣಕ್ಕೆ ಆಕ್ಷೇಪ!

ಬೆಂಗಳೂರಿನ ಕೆಕೆ ಗೆಸ್ಟ್ ಹೌಸ್ ನವೀಕರಣಕ್ಕೆ ಟೆಂಡರ್ ಪ್ರಕ್ರಿಯೆ ನಡೆಸದೆ ಮತ್ತು ಸಚಿವ ಸಂಪುಟದಲ್ಲಿ ಚರ್ಚಿಸದೆ ಸುಮಾರು 100 ಕೋಟಿ ರೂಪಾಯಿ ದುಂದುವೆಚ್ಚ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನು ವಿಜಯೇಂದ್ರ ಮಾಡಿದರು. ಗೆಸ್ಟ್ ಹೌಸ್ ಹೆಸರನ್ನು ಗಂಗಾ ಎಂದು ಬದಲಾಯಿಸಲಾಗಿದ್ದು, ನವೀಕರಣಕ್ಕೆ ತಗುಲಿದ ನಿಖರ ವೆಚ್ಚವನ್ನು ಮುಖ್ಯಮಂತ್ರಿಗಳು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು. ಗುತ್ತಿಗೆದಾರರಿಗೆ 2 ಕೋಟಿ ರೂಪಾಯಿ ಬಿಲ್ ಮಾಡಿಕೊಡುವಂತೆ ದೂರವಾಣಿ ಮೂಲಕ ಸೂಚಿಸಲಾಗಿದೆ ಎಂಬ ಮಾಹಿತಿಯೂ ಇದೆ. ಬರಗಾಲದ ಸಂದರ್ಭದಲ್ಲಿ ಇಂತಹ ದುಂದುವೆಚ್ಚದ ಅಗತ್ಯವೇನಿತ್ತು ಎಂದು ಅವರು ಪ್ರಶ್ನಿಸಿದರು.

ಇದೇ ವೇಳೆ, ಗಂಗಾ ಗೆಸ್ಟ್ ಹೌಸ್ ಗೃಹ ಪ್ರವೇಶ ಔತಣಕೂಟದಲ್ಲಿ ಬಿಜೆಪಿ ಶಾಸಕರು ಭಾಗವಹಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಯಾರೆಲ್ಲ ಭಾಗವಹಿಸಿದ್ದಾರೆ ಎಂಬ ಮಾಹಿತಿ ತಮಗಿಲ್ಲ, ಆದರೆ ಶಾಸಕರು ಭಾಗವಹಿಸಿರುವುದನ್ನು ತಾವು ವೈಯಕ್ತಿಕವಾಗಿ ಒಪ್ಪುವುದಿಲ್ಲ ಹಾಗೂ ಈ ಬಗ್ಗೆ ಶಾಸಕರೊಂದಿಗೆ ಮಾತನಾಡುವುದಾಗಿ ತಿಳಿಸಿದರು.

ಇದರೊಂದಿಗೆ, ಆಶಾ ಕಾರ್ಯಕರ್ತೆಯರಿಗೆ ನೀಡಲು ಹಣವಿಲ್ಲದ ಸರ್ಕಾರವು ಭಾರತ್ ಜೋಡೋ ಯುವಕರ ಸಂಘಗಳಿಗೆ ಹಣ ನೀಡಿದೆ ಎಂಬ ವಿಚಾರ ಗಮನಕ್ಕೆ ಬಂದಿದೆ. ತಮ್ಮ ಪಕ್ಷದ ಕಾರ್ಯಕರ್ತರನ್ನು ಪೋಷಿಸಲು ಸರ್ಕಾರದ ಹಣವನ್ನು ಬಳಸಿಕೊಳ್ಳುವುದು ಸರಿಯಲ್ಲ ಎಂದು ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದರು.

ನವೆಂಬರ್ 23 ರಿಂದ 25 ರವರೆಗೆ ರಾಜ್ಯವ್ಯಾಪಿ ಬಿಜೆಪಿ ಹೋರಾಟ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಹಾಗೂ ಬೆಲೆ ಏರಿಕೆ ನೀತಿಯನ್ನು ಖಂಡಿಸಿ, ಇದೇ ನವೆಂಬರ್ 23, 24 ಮತ್ತು 25 ರಂದು ರಾಜ್ಯದ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿ ವೈ ವಿಜಯೇಂದ್ರ ಘೋಷಿಸಿದರು.