

ಪ್ರಮುಖ ಮುಖ್ಯಾಂಶಗಳು
ಬೆಂಗಳೂರು: ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ ಮುಖ್ಯ ಗ್ರಂಥಪಾಲಕರ ಹುದ್ದೆಗಳನ್ನು ಶೀಘ್ರದಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೂಲಕ ಭರ್ತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಘೋಷಿಸಿದರು.
ಮುದ್ರಣ ಇಲಾಖೆಯ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ. ಕಳೆದ 10 ವರ್ಷಗಳಿಂದ ಪುಸ್ತಕಗಳ ಪುಟಗಳ ಮುದ್ರಣ ದರದಲ್ಲಿ ಯಾವುದೇ ಹೆಚ್ಚಳ ಮಾಡಿಲ್ಲ. ಇದೀಗ ಪ್ರತಿ ಪುಟದ ಮುದ್ರಣ ದರವನ್ನು 50 ಪೈಸೆ ಹೆಚ್ಚಿಸಲಾಗುವುದು ಎಂದು ಸಚಿವರು ಘೋಷಿಸಿದರು.
ಶಾಲಾ ಶಿಕ್ಷಣ ಇಲಾಖೆಯ ಭಾಗವಾಗಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಿಂದುಳಿದಿರುವುದು ಗಮನಕ್ಕೆ ಬಂದಿದೆ. ಇಲಾಖೆಯನ್ನು ಎಲ್ಲ ರೀತಿಯಿಂದಲೂ ಬಲಪಡಿಸಿ ಮುನ್ನೆಲೆಗೆ ತರಬೇಕಾಗಿದೆ. ಈ ನಿಟ್ಟಿನಲ್ಲಿ ಸಮಿತಿ ರಚಿಸಿ, ಗ್ರಂಥಾಲಯ ಇಲಾಖೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕುರಿತು ಚರ್ಚಿಸಲಾಗುವುದು. ಈ ಸಂಬಂಧ ಎಲ್ಲರ ಸಲಹೆಗಳಿಗೆ ಮುಕ್ತ ಸ್ವಾಗತವಿದೆ ಎಂದು ಸಚಿವರು ಹೇಳಿದರು.