ಅರಕಲಗೂಡು ಟಿಎಚ್‌ಒ ವಿರುದ್ಧ ಶಾಸಕ ಗರಂ

ಅರಕಲಗೂಡು ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಶಾಸಕ ಎ. ಮಂಜು ಮಾತನಾಡಿದರು. ತಾಪಂ ಇಒ ಶ್ರೀನಿವಾಸ್ ಜೆಜೆಎಂ ಎಇಇ ನವೀನ್ ಇದ್ದರು.
ಅರಕಲಗೂಡು ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಶಾಸಕ ಎ. ಮಂಜು ಮಾತನಾಡಿದರು. ತಾಪಂ ಇಒ ಶ್ರೀನಿವಾಸ್ ಜೆಜೆಎಂ ಎಇಇ ನವೀನ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎ.ಮಂಜು
  • ಸಭೆಗೆ ಗೈರುಹಾಜರಾದ ಟಿಎಚ್‌ಒ ಗೆ ನೋಟಿಸ್

ಅರಕಲಗೂಡು:

ಆರೋಗ್ಯ ಉಪ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ನಿವೇಶನಗಳನ್ನು ಹಸ್ತಾಂತರಿಸದೆ ವಿಳಂಬ ಮಾಡುತ್ತಿರುವ ತಾಲೂಕು ಆರೋಗ್ಯಾಧಿಕಾರಿ ಕಾರ್ಯವೈಖರಿಗೆ ಶಾಸಕ ಎ.ಮಂಜು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಅಭಿವೃದ್ಧಿ ಕಾಮಗಾರಿಗಳ ಪರಿಶೀಲನಾ ಸಭೆಗೆ ಗೈರುಹಾಜರಾದ ಟಿಎಚ್‌ಒ ಗೆ ನೋಟಿಸ್ ಜಾರಿ ಮಾಡಿ, ಅವರ ಕಾರ್ಯವೈಖರಿ ಕುರಿತು ಆರೋಗ್ಯ ಸಚಿವರ ಗಮನಕ್ಕೆ ತರುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯುವರಾಜ್ ಅವರಿಗೆ ತಾಕೀತು ಮಾಡಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿ ಮಾತನಾಡಿದರು. ಆರೋಗ್ಯ ಉಪಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅಗತ್ಯ ಅನುದಾನ ಹಾಗೂ ಯೋಜನೆಗಳಿದ್ದರೂ, ನಿವೇಶನ ಹಸ್ತಾಂತರದಲ್ಲಿ ಆಗುತ್ತಿರುವ ವಿಳಂಬದಿಂದ ಕಾಮಗಾರಿಗಳು ಕುಂಠಿತವಾಗುತ್ತಿದೆ ಎಂದು ಅಧಿಕಾರಿಗಳ ವಿರುದ್ಧ ಶಾಸಕರು ಗರಂ ಆದರು.
ಟಿಎಚ್‌ಒ ಇರುವುದು ಲಂಚ ತೆಗೆದುಕೊಳ್ಳುವುದಕ್ಕಾ...ಕೆಲಸ ಆಗಬೇಕಾದರೆ ಕೈ ಬಿಸಿ ಮಾಡಬೇಕೆ... ಸರ್ಕಾರದ ಕಾಮಗಾರಿಗಳಿಗೆ ಅಧಿಕಾರಿಗಳೇ ಅಡ್ಡಿಯಾಗಬಾರದು. ಸಭೆಗೆ ಬಾರದ ಟಿಎಚ್‌ಒ ಅವರ ಕಾರ್ಯವೈಖರಿ ಕುರಿತು ನೋಟಿಸ್ ನೀಡಿ. ಈ ವಿಚಾರವನ್ನು ಆರೋಗ್ಯ ಸಚಿವರ ಗಮನಕ್ಕೂ ತರುತ್ತೇನೆ ಎಂದು ಕಿಡಿಕಾರಿದರು.
ತಾಲೂಕಿನಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ನರ್ಸಿಂಗ್ ಹೋಂಗಳನ್ನು ಈಗ ಮುಚ್ಚಿಸಲಾಗುತ್ತಿದೆ. ಈಗ ಇಷ್ಟು ವರ್ಷಗಳಿಂದ ಅನಧಿಕೃತ ನರ್ಸಿಂಗ್ ಹೋಂಗಳು ಕಾರ್ಯನಿರ್ವಹಿಸಲು ಅವಕಾಶ ನೀಡಿದ್ದು ಹೇಗೆ ಎಂದು ಪ್ರಶ್ನಿಸಿದರು.
ಕುಡಿಯುವ ನೀರಿನ ಸಮಸ್ಯೆ ಕುರಿತು ತಾಪಂ ಇಒ ಶ್ರೀನಿವಾಸ್ ಅವರಿಂದ ಮಾಹಿತಿ ಪಡೆದರಲ್ಲದೆ, ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಪಿಡಿಒ ಗಳಿಗೆ ಸೂಚಿಸಿದ ಶಾಸಕರು, ಅಗತ್ಯವಿರುವ ಕಡೆ ಬೋರ್‌ವೆಲ್ ಕೊರೆಸಿ ನೀರಿನ ಸೌಲಭ್ಯ ಕಲ್ಪಿಸಬೇಕು. ಬೋರ್‌ವೆಲ್ ಕೊರೆಸಿದರೂ ವಿಫಲವಾಗಿದೆ ಎಂದು ಹೇಳಿ ಪಿಡಿಒಗಳು ಸಬೂಬು ಹೇಳಬಾರದು. ಸಮಸ್ಯೆ ಇರುವ ಗ್ರಾಮಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಮೂಲಕ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಜಲಜೀವನ ಮಿಷನ್ ಯೋಜನೆಯಡಿ ನಡೆಯುತ್ತಿರುವ ಕುಡಿಯುವ ನೀರಿನ ಕಾಮಗಾರಿಗಳ ಗುಣಮಟ್ಟ ಹಾಗೂ ಪೂರ್ಣಗೊಂಡಿರುವ ಬಗ್ಗೆ ಪರಿಶೀಲನೆ ನಡೆಸುವಂತೆ ಶಾಸಕರು ಸೂಚಿಸಿದರು.

ಕಾಮಗಾರಿ ಸಂಪೂರ್ಣವಾಗಿ ಮುಗಿಯುವ ಮುನ್ನ ಗುತ್ತಿಗೆದಾರರಿಗೆ ಬಿಲ್ ಪಾವತಿಸುವಂತಿಲ್ಲ. ಕಾಮಗಾರಿ ಪೂರ್ಣಗೊಂಡಿರುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ಖಚಿತಪಡಿಸಿಕೊಂಡ ಬಳಿಕವೇ ಅಗತ್ಯ ದಾಖಲೆಗಳನ್ನು ನೀಡಬೇಕು. ಕೆಲಸ ಪೂರ್ಣಗೊಳ್ಳದೆ ಗುತ್ತಿಗೆದಾರರಿಗೆ ಬಿಲ್ ಮಾಡಿಕೊಳ್ಳಲು ಅವಕಾಶ ನೀಡಬಾರದು ಎಂದು ಪಿಡಿಒಗಳಿಗೆ ಎ. ಮಂಜು ಕಟ್ಟುನಿಟ್ಟಿನ ಸೂಚನೆ ನೀಡಿದರು.

ತಾಲೂಕಿನಲ್ಲಿ ನೀರಾವರಿ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಏತ ನೀರಾವರಿ ಕಾಮಗಾರಿಗಳ ಪ್ರಗತಿ ಕುರಿತು ಮಾಹಿತಿ ಪಡೆದ ಶಾಸಕರು, ಬಾಕಿ ಉಳಿದಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕಾಮಗಾರಿಗಳ ಅನುಷ್ಠಾನದಲ್ಲಿ ಎದುರಾಗಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಸಮನ್ವಯದಿಂದ ಪರಿಹರಿಸಬೇಕು ಎಂದರು.

ದರಖಾಸ್ತು ಅರ್ಜಿಗಳ ವಿಲೇವಾರಿಗೆ ಸೂಚನೆ:
ದರಖಾಸ್ತು ಸಮಿತಿಯಲ್ಲಿ ಬಾಕಿ ಉಳಿದಿರುವ ಅರ್ಜಿಗಳ ವಿಲೇವಾರಿ ಕುರಿತು ಮಾಹಿತಿ ಪಡೆದ ಶಾಸಕರು, ಅರ್ಹ ಫಲಾನುಭವಿಗಳ ಅರ್ಜಿಗಳನ್ನು ನಿಯಮಾನುಸಾರ ಶೀಘ್ರವಾಗಿ ವಿಲೇವಾರಿ ಮಾಡಬೇಕು. ಅರ್ಜಿಗಳನ್ನು ಅನಗತ್ಯವಾಗಿ ಕಚೇರಿಗಳಲ್ಲಿ ಬಾಕಿ ಇರಿಸಿಕೊಳ್ಳಬಾರದು ಎಂದು ತಿಳಿಸಿದರು.

ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ನಿವೇಶನಗಳನ್ನು ಹಸ್ತಾಂತರಿಸುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಶೀಘ್ರವಾಗಿ ನಿವೇಶನ ಹಸ್ತಾಂತರಿಸಿ, ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಬೇಕು ಎಂದು ಸಿಡಿಪಿಒ ವೆಂಕಟೇಶ್‌ಗೆ ಸೂಚಿಸಿದರು.

ತಾಲೂಕಿನ ಕಂದಾಯ ಗ್ರಾಮಗಳನ್ನು ಗುರುತಿಸಿ, ಆ ಗ್ರಾಮಗಳ ಜನರಿಗೆ ಸರ್ಕಾರದ ವಿವಿಧ ಸವಲತು ಹಾಗೂ ಯೋಜನೆಗಳು ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ, ಅರ್ಹ ಜನರಿಗೆ ಸರ್ಕಾರಿ ಸೌಲಭ್ಯಗಳು ತಲುಪುವಲ್ಲಿ ವಿಳಂಬ ಅಥವಾ ತಾರತಮ್ಯ ಉಂಟಾಗಬಾರದು ಎಂದು ಹೇಳಿದರು.

ತಾಲೂಕಿನ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವುದರ ಜತೆಗೆ ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ಕುಡಿಯುವ ನೀರು, ಆರೋಗ್ಯ, ನೀರಾವರಿ, ಅಂಗನವಾಡಿ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಸೇವೆಗಳು ಜನರಿಗೆ ಸುಲಭವಾಗಿ ದೊರೆಯುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡುವುದರ ಜತೆಗೆ ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಗ್ರಾಪಂ ಪಿಡಿಒ ಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳ ಪ್ರಗತಿ ಹಾಗೂ ಬಾಕಿ ಕಾಮಗಾರಿಗಳ ಕುರಿತು ಮಾಹಿತಿ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net