ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ನೇಮಕ!...ಪ್ರಧಾನ್ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ಮುರ್ಮು | Pralhad Joshi

Pralhad Joshi
Pralhad Joshi
Published on
ನವದೆಹಲಿ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ ನಂತರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರನ್ನು ನೂತನ ತಾತ್ಕಾಲಿಕ ಶಿಕ್ಷಣ ಸಚಿವರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಿದೆ.
ಪ್ರಧಾನಮಂತ್ರಿಯವರ ಸಲಹೆಯ ಮೇರೆಗೆ ರಾಷ್ಟ್ರಪತಿಗಳು ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಅಂಗೀಕರಿಸಿದ್ದು, ಪ್ರಧಾನಿಯವರ ಶಿಫಾರಸಿನಂತೆ ಹಾಲಿ ಕ್ಯಾಬಿನೆಟ್ ಸಚಿವರಾಗಿರುವ ಪ್ರಹ್ಲಾದ್ ಜೋಶಿ ಅವರಿಗೆ ತಮ್ಮ ಪ್ರಸ್ತುತ ಖಾತೆಗಳ ಜೊತೆಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿ ರಾಷ್ಟ್ರಪತಿಗಳು ನಿರ್ದೇಶನ ನೀಡಿದ್ದಾರೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಪ್ರಹ್ಲಾದ್ ಜೋಶಿ ಅವರು ಪ್ರಸ್ತುತ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆಗಳ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಧರ್ಮೇಂದ್ರ ಪ್ರಧಾನ್ ಕಾರ್ಯ ಶ್ಲಾಘಿಸಿದ ಪ್ರಹ್ಲಾದ್ ಜೋಶಿ

ಇಂದು ರಾಜೀನಾಮೆ ನೀಡಿದ ಧರ್ಮೇಂದ್ರ ಪ್ರಧಾನ್ ಅವರನ್ನು ಶ್ಲಾಘಿಸಿರುವ ಜೋಶಿ, ಪ್ರಧಾನ್ ಅವರು ದಶಕಗಳ ಕಾಲ ಸುದೀರ್ಘ ಹಾಗೂ ಉಜ್ವಲ ರಾಜಕೀಯ ಜೀವನವನ್ನು ನಡೆಸಿದ್ದಾರೆ. ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಮತ್ತು ಬದ್ಧತೆಯನ್ನು ಸದಾ ನೆನಪಿಸಿಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ದೇಶದ ಅಭಿವೃದ್ಧಿಯ ಹಾದಿಯಲ್ಲಿ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಮತ್ತೆ ಜೊತೆಯಾಗಿ ಕೆಲಸ ಮಾಡುವ ಅವಕಾಶ ಸಿಗಲಿದೆ ಎಂಬ ಆಶಯವನ್ನು ಜೋಶಿ ವ್ಯಕ್ತಪಡಿಸಿದ್ದಾರೆ.
ಈ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಹ್ಲಾದ್ ಜೋಶಿ, ಪ್ರಧಾನ್​ ಅವರ ಆಡಳಿತಾವಧಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಯಶಸ್ವಿಯಾಗಿ ಜಾರಿಯಾಯಿತು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ 100ಕ್ಕೂ ಹೆಚ್ಚು ದೊಡ್ಡ ಮತ್ತು ಸಣ್ಣ ಸುಧಾರಣೆಗಳು ಬಂದವು. ವೈಯಕ್ತಿಕ ಹಿತಾಸಕ್ತಿಗಿಂತ ದೇಶದ ಹಿತಾಸಕ್ತಿಯನ್ನು ಎತ್ತಿಹಿಡಿದು ಹುದ್ದೆ ತೊರೆದಿರುವ ಪ್ರಧಾನ್ ಅವರ ನಿರ್ಧಾರವು, ರಾಷ್ಟ್ರ ನಿರ್ಮಾಣಕ್ಕೆ ಅವರು ನೀಡುತ್ತಿರುವ ಕೊಡುಗೆಗೆ ಯಾವುದೇ ರೀತಿಯಲ್ಲೂ ಅಡ್ಡಿಯಾಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ(ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net