ಮಳೆಗಾಲ ಪೂರ್ವ ಸಿದ್ಧತೆ ಕೈಗೊಳ್ಳಿ

ದಿಪೀಕಾ ನಾಯ್ಕರ್
ದಿಪೀಕಾ ನಾಯ್ಕರ್
Published on

ಪ್ರಮುಖ ಮುಖ್ಯಾಂಶಗಳು

  • ತಾಪಂ ಇಒ ದೀಪಿಕಾ ನಾಯ್ಕರ್​ ಸೂಚನೆ
ಹುಮನಾಬಾದ್​: ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಮುನ್ನೆಚ್ಚರಿಕಾ ಹಾಗೂ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಪಂಚಾಯತ್​ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಓ) ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ದೀಪಿಕಾ ನಾಯ್ಕರ್​ ಕಟ್ಟು ನಿಟ್ಟಿನ ಸೂಚನೆ ನೀಡಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಮಳೆಗಾಲ ಪೂರ್ವ ಸಿದ್ಧತೆ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮಗಳಲ್ಲಿ ಚರಂಡಿಗಳ ಸ್ವಚ್ಛತೆ, ರಸ್ತೆ ಬದಿಯ ನೀರು ಹರಿವಿನ ವ್ಯವಸ್ಥೆ, ಕುಡಿಯುವ ನೀರಿನ ಮೂಲಗಳ ಸ್ವಚ್ಛತೆ ಹಾಗೂ ವಿದ್ಯುತ್​ ತಂತಿಗಳ ಸುರಕ್ಷತೆ ಕುರಿತು ವಿಶೇಷ ಗಮನ ಹರಿಸಬೇಕು ಎಂದು ತಿಳಿಸಿದರು.
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಗ್ರಾಮಗಳಲ್ಲಿ ಸ್ವಚ್ಛತಾ ಕಾರ್ಯಗಳಿಗೆ ಆದ್ಯತೆ ನೀಡಬೇಕು. ಚರಂಡಿಗಳಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಸ ಸಂಗ್ರಹವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಅಪಾಯ ಸಂಭವಿಸಬಹುದಾದ ಹಳೆಯ ಕಟ್ಟಡಗಳು, ಮರಗಳು ಹಾಗೂ ವಿದ್ಯುತ್​ ಕಂಬಗಳ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಗ್ರಾಮ ಮಟ್ಟದಲ್ಲಿ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಿಬ್ಬಂದಿ ಸದಾ ಸಜ್ಜಾಗಿರಬೇಕು ಎಂದು ಹೇಳಿದರು.
ಭಾರೀ ಮಳೆಯಿಂದ ಮನೆಗಳಿಗೆ ಹಾನಿ, ರಸ್ತೆ ಕುಸಿತ ಅಥವಾ ಇತರೆ ಸಮಸ್ಯೆಗಳು ಉಂಟಾದಲ್ಲಿ ತಕ್ಷಣ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಜನರಿಗೆ ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಎಚ್ಚರಿಸಿದರು.
ವಿವಿಧ ಗ್ರಾಮ ಪಂಚಾಯಿತಿಗಳ ಪಿಡಿಒಗಳು, ಸಿಬ್ಬಂದಿ ಹಾಗೂ ಸಂಬಂಧಿಸಿದ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net