ಬಾಗಲಕೋಟೆ: ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಽ ಅವರ ವಿರುದ್ಧ ದ್ವೇಷಪೂರಿತ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಉಡುಪಿಯ ಬಿಜೆಪಿ ಶಾಸಕ ಯಶಪಾಲ ಸುವರ್ಣ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಲು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿ, ನವನಗರ ಪೊಲೀಸ್ ಠಾಣೆಯಲ್ಲಿ ಶಾಸಕರ ವಿರುದ್ಧ ದೂರು ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ನಾಗರಾಜ ಹದ್ಲಿ, ಸಂವಿಧಾನದ ಮೇಲೆ ಪ್ರಮಾಣವಚನ ಸ್ವೀಕರಿಸಿರುವ ಓರ್ವ ಶಾಸಕರೇ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಽ ಅವರ ವಿರುದ್ಧ ಪ್ರಚೋದನಕಾರಿ ಮತ್ತು ಬೆದರಿಕೆ ಹಾಕುವ ಭಾಷೆ ಬಳಸಿರುವುದು ಅತ್ಯಂತ ಖಂಡನೀಯ. ಇದು ಕೇವಲ ಒಬ್ಬ ವ್ಯಕ್ತಿಯ ವಿರುದ್ಧದ ಹೇಳಿಕೆಯಲ್ಲ, ದೇಶದ ಪ್ರಜಾಪ್ರಭುತ್ವ, ಸಂವಿಧಾನ ಮತ್ತು ವಿರೋಧ ಪಕ್ಷದ ಸ್ಥಾನಮಾನದ ಮೇಲಿನ ನೇರ ದಾಳಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ನಾಯಕರು ವಿರೋಧ ಪಕ್ಷದವರನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗದೆ ದ್ವೇಷ, ಬೆದರಿಕೆ ಮತ್ತು ಹಿಂಸೆಯ ಭಾಷೆೆಯನ್ನು ಬಳಸುತ್ತಿದ್ದಾರೆ. ಕಾನೂನು ಎಲ್ಲರಿಗೂ ಸಮಾನವಾಗಿದ್ದರೆ ಶಾಸಕ ಯಶಪಾಲ ಸುವರ್ಣ ಅವರ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಈ ಹೇಳಿಕೆಯನ್ನು ಖಂಡಿಸದಿದ್ದರೆ, ಅದು ಇಂತಹ ದ್ವೇಷಪೂರಿತ ರಾಜಕಾರಣಕ್ಕೆ ಪರೋಕ್ಷ ಬೆಂಬಲ ನೀಡಿದಂತಾಗುತ್ತದೆ
ವಿರೋಧ ಪಕ್ಷದ ನಾಯಕರ ವಿರುದ್ಧ ದ್ವೇಷ ಹರಡುವ ಮೂಲಕ ರಾಜಕೀಯ ಲಾಭ ಪಡೆಯುವ ಪ್ರಯತ್ನಗಳನ್ನು ಕಾಂಗ್ರೆಸ್ ಪಕ್ಷ ಎಂದಿಗೂ ಸಹಿಸುವುದಿಲ್ಲ. ದೇಶದಲ್ಲಿ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಕಾನೂನಿನ ಆಳ್ವಿಕೆ ಉಳಿಯಬೇಕಾದರೆ ಇಂತದ್ದಕ್ಕೆಲ್ಲ ನಿರ್ದಾಕ್ಷಿಣ್ಯ ಕ್ರಮ ಅನಿವಾರ್ಯ. ಪೊಲೀಸ್ ಇಲಾಖೆ ಯಾವುದೇ ಒತ್ತಡಕ್ಕೆ ಮಣಿಯದೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ಅಕ್ಬರ ಮುಲ್ಲಾ, ಎಸ್.ಎನ್.ರಾಂಪೂರ, ಶ್ರೀಧರ ನೀಲನಾಯಕ, ಜಟ್ಟೆಪ್ಪ ಮಾದಾಪೂರ ಸುನೀಲ ಬಾಲಗಾವಿ, ಹಾಜಿಸಾಬ ದಂಡಿನ, ಇಲಿಯಾಸ ಮದರಖಂಡಿ, ತಿಪ್ಪಣ್ಣ ನೀಲನಾಯಕ, ಸಿದ್ದಣ್ಣ ಗೋಡಿ, ಫಕೀರಪ್ಪ ಮಾದರ, ಜಯಜಂದ್ರ ಪೂಜಾರಿ ಇತರರು ಇದ್ದರು.