ಕಾರ್ಮಿಕ ವಿರೋಧಿ ಕಾನೂನುಗಳನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ಸಿಐಟಿಯು ಪದಾಧಿಕಾರಿಗಳು ವಿಜಯಪುರದ ಡಾ. ಬಿ.ಆರ್. ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಲಕ್ಷ್ಮಣ ಹಂದ್ರಾಳ, ಸುರೇಶ ಜೀಬಿ, ಸುನಂದಾ ನಾಯಕ ಮತ್ತಿತರರಿದ್ದಾರೆ.
ವಿಜಯಪುರ: ಕಾರ್ಮಿಕ ವಿರೋಧಿ ಕಾನೂನುಗಳನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಸಂಘಟನೆಯ ಪದಾಧಿಕಾರಿಗಳು ಸೇರಿ ಕಾರ್ಮಿಕ ಬಿಲ್‌ಗಳನ್ನು ದಹಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಮೊಳಗಿಸಿ, ಕೂಡಲೇ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.
ಕಾರ್ಮಿಕ ಮುಖಂಡ ಲಕ್ಷ್ಮಣ ಹಂದ್ರಾಳ ಮಾತನಾಡಿ, ಕೇಂದ್ರದ ಎನ್‌ಡಿಎ ಸರ್ಕಾರ ಪ್ರಜಾಪ್ರಭುತ್ವ ಮೌಲ್ಯಗಳನ್ನು ಗಾಳಿಗೆ ತೂರಿ ಕಾರ್ಮಿಕ ಸಂಹಿತೆಗಳ ಅನುಷ್ಠಾನಕ್ಕೆ ತರುವ ಅಂತಿಮ ಪ್ರಕಟಣೆ ಮಾಡಿತು. ಬಿಹಾರ ರಾಜ್ಯದಲ್ಲಿನ ವಿಧಾನ ಸಭಾ ಚುನಾವಣೆಗಳ ಗೆಲುವಿನ ಅಹಂಕಾರದೊಂದಿಗೆ ಈ ವಂಚನೆಯನ್ನು ಬಿಜೆಪಿ ಪಕ್ಷದ ನೇತೃತ್ವದಲ್ಲಿನ ಕೇಂದ್ರದ ಎನ್‌ಡಿಎ ಸರ್ಕಾರ ಮಾಡಿದೆ. ಈ ನಾಲ್ಕು ಸಂಹಿತೆಗಳಿಗೆ ನಿಯಮಾವಳಿಗಳನ್ನು ರೂಪಿಸಲು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರಲಾಗುತ್ತಿತ್ತು. ಈ ಸಂಹಿತೆಗಳಿಗೆ ಕೇಂದ್ರ ಸರ್ಕಾರವು ನಿಯಮಾವಳಿಗಳನ್ನು ಅಂತಿಮ ಪ್ರಕಟಣೆ ಮಾಡದಿದ್ದ ಕಾರಣ ಈ ಸಂಹಿತೆಗಳು ಜಾರಿಗೆ ಬರಲಿಲ್ಲ ಎಂದರು.
ಕೇಂದ್ರ ಸರ್ಕಾರ ಪ್ರಕಟಿಸಿದ ಕರಡು ನಿಯಮಾವಳಿಗಳಿಗೆ ಕಾರ್ಮಿಕ ಸಂಘಟನೆಗಳು ಹಾಗು ಸಿಐಟಿಯು ಸಂಘಟನೆ ಸಲ್ಲಿಸಿದ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸದೆ, ಅಂತಿಮ ನಿಯಮಾವಳಿಗಳನ್ನು ಪ್ರಕಟಿಸಿ ನಾಲ್ಕು ಸಂಹಿತೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಸದ್ಯ ಐದು ರಾಜ್ಯಗಳ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದೆ. ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಲ್ಲಿನ ಗೆಲುವು ನೀಡಿರುವ ಅಹಂಕಾರದೊಂದಿಗೆ ಈ ಕಪಟ ಹಾಗೂ ವಂಚನೆಯನ್ನು ಕೇಂದ್ರ ಸರ್ಕಾರ ದೇಶದ ಕಾರ್ಮಿಕ ವರ್ಗದ ವಿರುದ್ಧ ಮಾಡಿದೆ ಎಂದು ಅಸಮಾಧಾನ ಹೊರಹಾಕಿದರು.
ಸರ್ಕಾರವು ಹಠಮಾರಿ ಧೋರಣೆಯೊಂದಿಗೆ, ಕೇಂದ್ರ ಕಾರ್ಮಿಕ ಸಂಘಗಳ ಯಾವುದೇ ಮನವಿಗಳು, ಪ್ರತಿಭಟನೆಗಳು ಮತ್ತು ಮುಷ್ಕರಗಳನ್ನು ಲಕ್ಷಿಸದೇ, ಬಂಡವಾಳಶಾಹಿಗಳ ಬೇಡಿಕೆಗಳನ್ನು ಪೂರೈಸಲು ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಿದೆ. ಇದು ಅತ್ಯಂತ ದೇಶದ್ರೋಹಿ ಕ್ರಮವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಐಟಿಯು ಸಹ ಸಂಚಾಲಕ ಸುರೇಶ ಜೀಬಿ ಮಾತನಾಡಿ, ಹಲವು ದಶಕಗಳಿಂದ ಹೋರಾಟಗಳ ಮೂಲಕ ಗಳಿಸಲಾದ ಕಾರ್ಮಿಕರ ಮೂಲ ಹಕ್ಕುಗಳನ್ನು ಹಾಗೂ ಸವಲತ್ತುಗಳನ್ನು ನಾಶ ಮಾಡುವ ಕ್ರಮ ಇದಾಗಿದೆ. ಬಂಡವಾಳಿಗರು ಮಾಡುತ್ತಿದ್ದ ಎಲ್ಲ ಕಾನೂನು ಉಲ್ಲಂಘನೆಗಳನ್ನು ಕಾನೂನು ಬದ್ಧಗೊಳಿಸುವುದಲ್ಲದೆ, ಕಾಯಂ ಉದ್ಯೋಗದ ಅವಕಾಶಗಳೇ ಭಾರತೀಯ ಯುವ ಪೀಳಿಗೆಗಳಿಗೆ ಇಲ್ಲದಂತೆ ಮಾಡುವ ಕ್ರಮವಾಗಿದೆ. ನವ ಗುಲಾಮಗಿರಿಗೆ ಹಾಲಿ ಹಾಗೂ ಭಾವಿ ಕಾರ್ಮಿಕರನ್ನು ಒಳಪಡಿಸುವ ಕುತಂತ್ರವಾಗಿದೆ ಎಂದು ದೂರಿದರು.