ಹುಮನಾಬಾದ್ ಶುಕ್ರವಾರ ಕರೆದಿದ್ದ ಶಾಲಾ-ಕಾಲೇಜು ಆಡಳಿತ ಮಂಡಳಿ ಒಕ್ಕೂಟದ ಪೂರ್ವಭಾವಿ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಒಕ್ಕೂಟದ ಅಧ್ಯ ಭೀಮರಾವ ಪಾಟೀಲ್ ಮಾತನಾಡಿದರು. ಅಂಕುಶ ಗೋಖಲೆ, ರಮೇಶ ಗಾದಾ, ಬಾಬು ಟೈಗರ್ ಇತರರಿದ್ದರು.
ಹುಮನಾಬಾದ್: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ, ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಾಲೂಕು ಶಾಲಾ-ಕಾಲೇಜು ಆಡಳಿತ ಮಂಡಳಿ ಒಕ್ಕೂಟ ಶನಿವಾರ ಬೆಳಗ್ಗೆ 10ಕ್ಕೆ ಹಳೆಯ ತಹಸಿಲ್ ಕಚೇರಿಯಿಂದ ಬಸವೇಶ್ವರ ವೃತ್ತ, ಬಾಲಾಜಿ, ಸರ್ದಾರ್ ಪಟೇಲ್, ಡಾ.ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ ಎಂದು ಒಕ್ಕೂಟದ ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ್ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಶಾಲಾ-ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗಿದೆ. ಪ್ರಕರಣದ ಸಮಗ್ರ ಮತ್ತು ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧಮೇರ್ಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ನೀಟ್ ಪರೀಕ್ಷೆ ಒತ್ತಡ ಹಾಗೂ ವಿವಾದಗಳಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ಒಂದು ಕೋಟಿ ರೂ. ಪರಿಹಾರ ನೀಡಬೇಕು. ದೆಹಲಿಯಲ್ಲಿ ನ್ಯಾಯಯುತ ಬೇಡಿಕೆಗಳಿಗಾಗಿ ಹೋರಾಟ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ತಣ ಹಿಂಪಡೆಯಬೇಕೆಂಬ ಬೇಡಿಕೆಯೊಂದಿಗೆ ನಡೆಯುವ ಹೋರಾಟದಲ್ಲಿ ವಿದ್ಯಾರ್ಥಿಗಳು, ಪಾಲಕರು, ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಪ್ರಮುಖರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲಿಸುವಂತೆ ಮನವಿ ಮಾಡಿದರು.