ಚಿಟಗುಪ್ಪ: ಮಳೆ ಕೊರತೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಎಕರೆಗೆ 50 ಸಾವಿರ ರೂ. ಪರಿಹಾರ ಘೋಷಿಸುವುದರೊಂದಿಗೆ ರೈತರ ಕೃಷಿ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿ ಕನ್ನಡ ಸೇನೆ ಕರ್ನಾಟಕ ಸಂಘಟನೆಯಿಂದ ಬುಧವಾರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ನಂತರ ತಹಸಿಲ್ ಕಚೇರಿಯಲ್ಲಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರ ಸಲ್ಲಿಸಲಾಯಿತು. ಸಂಘಟನೆಯ ಮುಖಂಡರು ಮಾತನಾಡಿ, ಕಳೆದ ಹಲವು ದಿನಗಳಿಂದ ಸಮರ್ಪಕ ಮಳೆಯಾಗದ ಕಾರಣ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಹಕಾರಿ ಸಂಘಗಳು ಹಾಗೂ ಬ್ಯಾಂಕ್ಗಳಿಂದ ಸಾಲ ಪಡೆದು ಉತ್ತಮ ಗುಣಮಟ್ಟದ ಬೀಜ, ಗೊಬ್ಬರ ಮತ್ತು ಕೃಷಿ ಸಾಮಗ್ರಿ ಖರೀದಿಸಿ ಬಿತ್ತನೆ ಮಾಡಿದರೂ ಮಳೆಯ ಕೊರತೆಯಿಂದ ಬೀಜಗಳು ಮೊಳಕೆಯೊಡೆಯದೆ ನಷ್ಟ ಉಂಟಾಗಿದೆ ಎಂದು ತಿಳಿಸಿದರು. ಕೃಷಿಗೆ ಮಾಡಿದ ಹೂಡಿಕೆ ಸಂಪೂರ್ಣ ವ್ಯರ್ಥವಾಗಿದ್ದು, ರೈತರು ಆರ್ಥಿಕ ಸಂಕಷ್ಟದ ಜತೆಗೆ ಕುಟುಂಬ ನಿರ್ವಹಣೆಯ ಸಮಸ್ಯೆ ಎದುರಿಸುತ್ತಿದ್ದಾರೆ. ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಿ ಬೆಳೆ ಹಾನಿಗೆ ಪರಿಹಾರ ಘೋಷಿಸಬೇಕು ಹಾಗೂ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು. ಸೇನೆಯ ಪ್ರಮುಖರಾದ ರವಿ ಸ್ವಾಮಿ, ಸುಭಾಷ ಕೆನಾಡೆ, ಪವನ್ ಪೂಜಾರಿ ಇತರರಿದ್ದರು.