ದೇವರಹಿಪ್ಪರಗಿ ತಾಲೂಕು ಪಂಚಾಯಿತಿ ಆವರಣದಲ್ಲಿ ಜರುಗಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯ ಯೋಜನಾಧಿಕಾರಿ ಚಂದ್ರಕಾಂತ ಕುಂಬಾರ ಮಾತನಾಡಿದರು. ಭಾರತಿ ಚಲುವಯ್ಯ, ಶಿವಾನಂದ ಮೂಲಿಮನಿ, ಶಾಂತಗೌಡ ನ್ಯಾಮಣ್ಣವರ ಇತರರಿದ್ದರು.
ದೇವರಹಿಪ್ಪರಗಿ: ಜಿಪಿಎಸ್ ಪ್ರಕ್ರಿಯೆಯಲ್ಲಿ ಹೆಚ್ಚಿನ ನಿಗಾವಹಿಸಿ, ಅರ್ಹ ಫಲಾನುಭವಿಗಳಿಗೆ ವಸತಿ ಸೌಲಭ್ಯ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿ.ಪಂ. ಮುಖ್ಯ ಯೋಜನಾಧಿಕಾರಿ ಚಂದ್ರಕಾಂತ ಕುಂಬಾರ ಹೇಳಿದರು.
ತಾಲೂಕು ಪಂಚಾಯಿತಿ ಆವರಣದಲ್ಲಿ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಸತಿ ಯೋಜನೆಗಳ ಪ್ರಗತಿ ಕುರಿತು ಪರಿಶೀಲನೆ ನಡೆಸಿ, ಪ್ರತಿ ಮನೆ ಮಂಜೂರಾತಿಗೆ ಸಂಬಂಧಿಸಿದ ಕಡತಗಳನ್ನು ತ್ವರಿತವಾಗಿ ಪರಿಶೀಲಿಸಿ ಅನುಮೋದನೆ ನೀಡಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರತಿ ಸೋಮವಾರ ವಸತಿ ಯೋಜನೆಗಳಿಗೆ ಸಂಬಂಧಿಸಿದ ವಿಶೇಷ ಅಭಿಯಾನ ನಡೆಸಬೇಕು. ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ), ಬಸವ ಆವಾಸ್ ಯೋಜನೆ ಹಾಗೂ ಅಂಬೇಡ್ಕರ್ ಆವಾಸ್ ಯೋಜನೆ ಲಾನುಭವಿಗಳ ಮನೆ ನಿರ್ಮಾಣಕ್ಕೆ ಎದುರಾಗುವ ತೊಡಕು ನಿವಾರಿಸಿ, ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಶಿಥಿಲಾವಸ್ಥೆ ಸರ್ಕಾರಿ ಹಾಗೂ ಖಾಸಗಿ ಕಟ್ಟಡಗಳ ಸಮಗ್ರ ಸಮೀಕ್ಷೆ ನಡೆಸಿ, ಜಿಲ್ಲಾ ಪಂಚಾಯಿತಿಗೆ ತ್ವರಿತ ವರದಿ ಸಲ್ಲಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿ ಹಾನಿ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಮನರೇಗಾ ಯೋಜನೆಯಡಿ ಮಾನವ ದಿನಗಳ ಸೃಜನೆ, ಕಾರ್ಮಿಕರ ತೊಡಗಿಸಿಕೊಳ್ಳುವಿಕೆ, ಇ-ಕೆವೈಸಿ ಪ್ರಗತಿ ಹಾಗೂ ಗ್ರಾ.ಪಂ. ವ್ಯಾಪ್ತಿಯಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆ, ನೀರಿನ ಟ್ಯಾಂಕರ್‌ಗಳ ಸ್ವಚ್ಛತೆ ಹಾಗೂ ವಿವಿಧ ತರಬೇತಿ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ವಿಶೇಷ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಚಲುವಯ್ಯ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಶಿವಾನಂದ ಮೂಲಿಮನಿ, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಶಾಂತಗೌಡ ನ್ಯಾಮಣ್ಣವರ, ಸಹಾಯಕ ಯೋಜನಾಧಿಕಾರಿ ಶ್ರೀನಿವಾಸ ಪವಾರ, ಎಸ್‌ಬಿಎಂ ವಿಷಯ ನಿರ್ವಾಹಕ ಆನಂದ ಮುದೋಡಗಿ, ವಿಷಯ ನಿರ್ವಾಹಕ ಗೊಲ್ಲಾಳ ರೋಡಗಿ ಇತರರಿದ್ದರು.