ಯಾದಗಿರಿಯಲ್ಲಿ ಬುಧವಾರ ನಡೆದ ಕಲಿಕೆ ಸಂಸ್ಥೆ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಿಸಿ ರಾಹುಲ್ ಪಾಂಡ್ವೆ, ಜಿಪಂ ಸಿಇಒ ಲವೀಶ್ ಓರ್ಡಿಯಾ, ಮಹೇಶಕುಮಾರ, ನೀಲಯ್ಯ, ಶಿವರಾಜ ನಾಯಕ ಇತರರಿದ್ದರು.
ಯಾದಗಿರಿ: ಕಲಿಕೆ ಸಂಸ್ಥೆಯ ಸಂಪನ್ಮೂಲ ಅಧಿಕಾರಿಗಳಿಗೆ ಗೌರವ ನೀಡುವುದರ ಜತೆ ಹೈಸ್ಕೂಲ್ ಮತ್ತು ವಸತಿನಿಲಯಗಳಲ್ಲಿ ಲಭ್ಯವಿರುವ ಸಾಮಗ್ರಿಗಳ ಕುರಿತು ಮಾಹಿತಿಯನ್ನು ಒದಗಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರ್ಡಿಯಾ ಸೂಚಿಸಿದರು.
ಡಿಸಿ ಕಚೇರಿಯಲ್ಲಿ ಬುಧವಾರ ಕರೆದಿದ್ದ ಕಲಿಕೆ ಸಂಸ್ಥೆ 3.0 ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮಕ್ಕಳ ಸುರತೆಗೆ ಸಂಬಂಧಿಸಿದಂತೆ ಹಾಸ್ಟೆಲ್ಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಮಾತನಾಡಿ, ಯೋಜನೆಗೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ನಿರ್ವಹಿಸುವುದರ ಜತೆ ನಿಗದಿತ ಅವಧಿಯೊಳಗೆ ಯೋಜಿತ ಕಾರ್ಯಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ಹಾಗೂ ಕಲಿಕಾ ಗುಣಮಟ್ಟ ಹೆಚ್ಚಿಸಲು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ವಿವಿಧ ವಸತಿ ಶಾಲೆಗಳಲ್ಲಿ ಅನುಷ್ಠಾನಗೊಂಡ ಕಾರ್ಯಕ್ರಮ, ಮಕ್ಕಳ ಕಲಿಕಾ ಮಟ್ಟದಲ್ಲಿ ಕಂಡುಬಂದ ಸುಧಾರಣೆ ಹಾಗೂ ಮುಂದಿನ ಶೈಕ್ಷಣಿಕ ವರ್ಷದ ಕಾರ್ಯಯೋಜನೆ ಕುರಿತು ವಿವರಿಸಿದರು.
ಕಲಿಕೆ ಸಂಸ್ಥೆಯ ಮಹೇಶಕುಮಾರ, ನೀಲಯ್ಯ ಹಾಗೂ ಶಿವರಾಜ ನಾಯಕ ಅವರು ಯೋಜನೆಯಡಿ ಕಳೆದ ವರ್ಷ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಅನುಷ್ಠಾನಗೊಳಿಸಿದ ಕಾರ್ಯಕ್ರಮಗಳ ಕುರಿತು ಪವರ್ ಪಾಯಿಂಟ್ ಮೂಲಕ ವಿವರ ಮಾಹಿತಿ ನೀಡಿದರು.