ಲಕ್ಕೂರು: ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸಂಯಮ, ಸಮಯ ಪಾಲನೆ ಅಳವಡಿಸಿಕೊಂಡರೆ ಜೀವನದಲ್ಲಿ ಸಾಧನೆ ಮಾಡಬಹುದು ಎಂದು ಎಸ್ಡಿಎಂಸಿ ಅಧ್ಯಕ್ಷ ಸಿ.ಪುರುಷೋತ್ತಮ ಹೇಳಿದರು.success
ಮಾಲೂರು ತಾಲೂಕು ಲಕ್ಕೂರು ಗ್ರಾಮದ ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಹಾಗೂ ಪಾಲಕರ ಸಭೆಯಲ್ಲಿ ಮಾತನಾಡಿ, ಈ ಶಾಲೆಯನ್ನು ಬ್ರಿಟಿಷರ ಕಾಲದಲ್ಲಿ ಪ್ರಾರಂಭಿಸಿದ್ದು, ಸುಮಾರು 125 ವರ್ಷ ಪೂರೈಸಿದೆ. ಅಂದಿನಿಂದ ಇಂದಿನವರೆಗೂ ಶಾಲೆ ಉತ್ತಮ ರೀತಿಯಲ್ಲಿ ಮುನ್ನಡೆಯುತ್ತಿದೆ. ಶಾಲೆಯನ್ನು ಪ್ರಸ್ತುತ ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಅನುಕೂಲ ಆಗಿದೆ ಎಂದು ಹೇಳಿದರು.
ಶಾಲೆಯ ಆವರಣದಲ್ಲಿ 1ರಿಂದ 8ನೇ ತರಗತಿಯವರೆಗೆ ವ್ಯಾಸಂಗ ಮಾಡಲು ಸುಸಜ್ಜಿತ ಕಟ್ಟಡ, ಶೌಚಗೃಹ, ಅಡುಗೆ ಕೋಣೆ, ಕಂಪ್ಯೂಟರ್, ಡಿಜಿಟಲ್ ಲೈಬ್ರರಿ, ಆಧುನಿಕ ಗಣಿತ ಕಿಟ್, ಪ್ರತಿ ತರಗತಿಯಲ್ಲಿ ಎಲ್ಇಡಿ ಪರದೆ, ಸಿಸಿ ಟಿವಿ ಅಳವಡಿಸಿ ಹಲವು ಮೂಲ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಶಾಲೆಯ ಮುಖ್ಯಶಿಕ್ಷಕ ವೇಣುಗೋಪಾಲ್ ಮಾತನಾಡಿ, ಪಾಲಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಲು ಹೆಚ್ಚಿನ ಡೊನೇಷನ್ ನೀಡಿ ಖಾಸಗಿ ಶಾಲೆಗಳಿಗೆ ದಾಖಲಿಸುತ್ತಾರೆ. ಆದರೆ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗದಂತಾಗಿದೆ ಎಂದರು.