

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಮುಂದಿನ 3 ದಿನ ಜೋರು ಮಳೆಯಾಗಲಿದೆ. ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಬೆಂ. ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬಾಗಲಕೋಟೆ ಮತ್ತು ಬೆಳಗಾವಿ ಸೇರಿ ಉತ್ತರ ಕರ್ನಾಟಕದ ಭಾಗಗಳಲ್ಲಿ ಜೂ.13ರಿಂದ ಜೂ.15ವರೆಗೆ ಲಘು ಪ್ರಮಾಣದಲ್ಲಿ ಮಳೆ ಸುರಿಯಲಿದೆ.
ರಾಜ್ಯದಲ್ಲಿ ಸದ್ಯ ಮುಂಗಾರು ದುರ್ಬಲವಾಗಿದೆ. ಆದರೆ, ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಜೂ.12ವರೆಗೆ ಮುಂಗಾರು ಮಳೆ ಕೊರತೆಯಾಗಿದ್ದು, ಮುಖ್ಯ ವಾಗಿ ಕರಾವಳಿ, ಮಲೆನಾಡು ಭೌಗೋಳಿಕ ಪ್ರದೇಶಗಳಲ್ಲಿ ಮಳೆ ಅಭಾವವಾಗಿದೆ. ಮುಂಗಾರು ಆಗಮನದ ಆರಂಭದಲ್ಲೇ ಪಶ್ಚಿಮಘಟ್ಟದಲ್ಲಿ ಜೋರು ಮಳೆಯಾಗುತ್ತಿತ್ತು. ಈ ಬಾರಿ ಅಂತಹ ವಾತಾವರಣ ಕಾಣಿಸುತ್ತಿಲ್ಲ ಎಂದು ಹಿರಿಯ ಹವಾಮಾನ ತಜ್ಞ ಡಾ. ಶ್ರೀನಿವಾಸರೆಡ್ಡಿ ತಿಳಿಸಿದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಮೋಡ, ಬಿಸಿಲಿನ ವಾತಾವರಣ ಮುಂದುವರಿದಿದ್ದು, ಕೆಲವೆಡೆ ಸಾಧಾರಣ ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಐದಾರು ದಿನಗಳಿಂದ ಮೋಡ ಮುಸುಕಿದ ವಾತಾವರಣ ಮುಂದುವರಿದಿದೆ.
ಕೆ.ಆರ್.ನಗರ ತಾಲೂಕು ಬೆಟ್ಟದಪುರ ಸಮೀಪದ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸಿಡಿಲು ಬಡಿದು ರೈತ ಎಸ್. ಟಿ.ಆನಂದ್ (60) ಮೃತಪಟ್ಟಿದ್ದಾರೆ. ಜಮೀನಿನಲ್ಲಿ ತಂಬಾಕು ಬೆಳೆಗೆ ನೀರು ಹಾಯಿಸುತ್ತಿದ್ದ ವೇಳೆ ಮಳೆ ಶುರುವಾಗಿದ್ದು, ಆ ಸಮಯದಲ್ಲಿ ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಬಡಿದು ತೀವ್ರ ಅಸ್ವಸ್ಥಗೊಂಡಿದ್ದಾರೆ. ಸ್ಥಳೀಯರು ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ.