ರಾಜ್ಯದಲ್ಲಿ ಮಾಸಾಂತ್ಯವರೆಗೆ ಮಳೆ: ಕೆಲವೆಡೆ ಬಿರುಗಾಳಿ ಸಹಿತ ವರ್ಷಧಾರೆ-Rain
ರಾಜ್ಯದಲ್ಲಿ ಮಾಸಾಂತ್ಯವರೆಗೆ ಮಳೆ
Published on:
Copied
Follow Us
ಬೆಂಗಳೂರು:ರಾಜ್ಯದಲ್ಲಿ ಮಾಸಾಂತ್ಯವರೆಗೆ ಮಳೆಯಾಗುವ ಸಾಧ್ಯತೆ ಇದೆ.ಈ ಸಂದರ್ಭದಲ್ಲಿ ಕೆಲವೆಡೆ ಬಿರುಗಾಳಿ ಸಹಿತ ಬಿರುಸಾಗಿ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಉತ್ತರ ಕರ್ನಾಟಕ ಸೇರಿ ರಾಜ್ಯದ ಕೆಲವೆಡೆ ಭಾನುವಾರವೂ ವರುಣಾರ್ಭಟ ಮುಂದುವರಿದಿತ್ತು. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಮಂಡ್ಯದಲ್ಲಿ ಮೇ 25ರಂದು, ಚಿಕ್ಕಮಗಳೂರು, ತುಮಕೂರು, ಧಾರವಾಡ, ಗದಗ, ಹಾವೇರಿಯಲ್ಲಿ ಮುಂದಿನ 2 ದಿನ ಹಾಗೂ ಚಿತ್ರದುರ್ಗ, ಶಿವಮೊಗ್ಗದಲ್ಲಿ ಮೇ 26ರಂದು ಜೋರಾಗಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ.
ಈ ಮೇಲಿನ ಜಿಲ್ಲೆಗಳಲ್ಲಿ ಮೇ 31ವರೆಗೆ ಮಳೆ ಇರಲಿದೆ. ಕರಾವಳಿ ಕರ್ನಾಟಕ ವ್ಯಾಪ್ತಿಯ ಪ್ರದೇಶದಲ್ಲಿ ಪ್ರತಿ ಗಂಟೆಗೆ 60 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಹಾಗಾಗಿ, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮುಂದಿನ 2 ದಿನ ಹಾಗೂ ಬೆಂಗಳೂರು ನಗರ,ಬೆಂ.ಗ್ರಾಮಾಂತರ, ಬೆಂ.ದಕ್ಷಿಣ, ಚಾಮರಾಜನಗರ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆಯಲ್ಲಿ ಮುಂದಿನ 5 ದಿನ ಸಾಧಾರಣ ವರ್ಷಧಾರೆಯಾಗಲಿದೆ.
ರಾಜ್ಯದಲ್ಲಿ ಮುಂದಿನ 5 ದಿನಗಳವರೆಗೆ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಮಳೆ ಹಿನ್ನೆಲೆಯಲ್ಲಿ ಉಷ್ಣಾಂಶ ಕುಸಿತವಾಗಲಿದೆ ಎಂದು ಇಲಾಖೆ ಹೇಳಿದೆ.