ಆಷಾಢ ಶುಕ್ರವಾರದ ಅಂಗವಾಗಿ ತಾಲೂಕಿನ ಪ್ರಸಿದ್ಧ ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನ ಹಾಗೂ ಅನ್ನಸಂತರ್ಪಣೆ ನೆರವೇರಿತು.
ಬೆಳಗ್ಗೆಯಿಂದಲೇ ನೂರಾರು ಭಕ್ತರು ಬೆಟ್ಟಕ್ಕೆ ಆಗಮಿಸಿ ತಾಯಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದಲ್ಲಿ ಅಭಿಷೇಕ, ಅಲಂಕಾರ, ಅರ್ಚನೆ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯ ನಡೆಯಿತು. ನಂತರ ಉತ್ಸವ ಮೂರ್ತಿಯನ್ನು ದೇವಸ್ಥಾನದ ಸುತ್ತ ಭಕ್ತಿಭಾವದಿಂದ ಮೆರವಣಿಗೆ ಮಾಡಲಾಯಿತು. ಈ ವೇಳೆ ಭಕ್ತರು ಜಯಘೋಷ ಮೊಳಗಿಸಿದರು.
ಬಿ.ಮಟಕರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಂದ್ರಶೇಖರ್ ಕುಟುಂಬ ಸಮೇತರಾಗಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಎಸ್‌ಆರ್‌ಕೆ ಕುಮಾರ್, ಹರೀಶ್, ಗಣಪ, ಮಹೇಂದ್ರ, ರವಿ, ಸೂರಿ, ಅಂಬಾರಿ ಕೃಷ್ಣ, ನಂಜುಂಡಸ್ವಾಮಿ, ಮನೋಜ್, ದೇವಸ್ಥಾನದ ಪಾರುಪತ್ತೆದಾರ ಮಹದೇವಸ್ವಾಮಿ, ಅರ್ಚಕ ಪ್ರಸ್ನನ ಕುಮಾರ್ ಇತರರಿದ್ದರು.