ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯಲ್ಲಿ ಉದ್ಯೋಗವು ಪ್ರತಿಯೊಬ್ಬ ವ್ಯಕ್ತಿಯ 'ಹಕ್ಕು' ಹಾಗೂ 'ಬೇಡಿಕೆ ಆಧಾರಿತ'ವಾಗಿತ್ತು. ಆದರೆ ಹೊಸ ಕಾಯ್ದೆಯಲ್ಲಿ ಇದನ್ನು ಕೇಂದ್ರ ಸರ್ಕಾರ ರೂಪಿಸುವ ಮಾನದಂಡಗಳ ಹಂಗಿಗೆ ಒಳಪಡಿಸಿ ಜನರ ಹಕ್ಕನ್ನು ಕಸಿದುಕೊಳ್ಳಲಾಗಿದೆ. ದೆಹಲಿಯ ದಂತ ಗೋಪುರದಲ್ಲಿ ಕುಳಿತು ಯೋಜನೆಗಳನ್ನು ರೂಪಿಸುವ ಮೂಲಕ, ಗ್ರಾಮಸಭೆಗಳ ಅಧಿಕಾರವನ್ನು ಕಿತ್ತುಕೊಳ್ಳಲಾಗಿದೆ. ಗ್ರಾಮ ಪಂಚಾಯತಿಗಳು ತಮ್ಮ ಅಗತ್ಯಕ್ಕೆ ತಕ್ಕಂತೆ ಕಾಮಗಾರಿಗಳನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ಕಳೆದುಕೊಂಡಿವೆ. ಕೇಂದ್ರ ಸರ್ಕಾರ ಆಯ್ಕೆ ಮಾಡಿದ ಪಂಚಾಯತಿಗಳಲ್ಲಿ ಮಾತ್ರ ಯೋಜನೆ ಜಾರಿಯಾಗುತ್ತಿದ್ದು, ಉಳಿದ ಕಡೆಗಳಲ್ಲಿ ಉದ್ಯೋಗದ ಹಕ್ಕನ್ನು ನಿರಾಕರಿಸಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯಡಿ ನಮ್ಮ ಹೊಲ-ನಮ್ಮ ದಾರಿ, ದನದ ಕೊಟ್ಟಿಗೆ, ಕುರಿ ದೊಡ್ಡಿ, ಕಣ, ಶಾಲಾ ಕಾಂಪೌಂಡ್,ಶೌಚಾಲಯ, ಬದು, ಹೊಳಗಟ್ಟಿ, ಪಂಚಾಯತಿ ಕಟ್ಟಡ (ರಾಜೀವ ಗಾಂಧಿ ಸೇವಾ ಕೇಂದ್ರ), ತೋಟಗಾರಿಕೆ ಬೆಳೆಗಳು, ಆಟದ ಮೈದಾನದಂತಹ ಸ್ಥಳೀಯವಾಗಿ ಅಗತ್ಯವಿರುವ ಗ್ರಾಮೀಣ ಆಸ್ತಿಗಳನ್ನು ನಿರ್ಮಿಸಲಾಗುತ್ತಿತ್ತು. ಹೊಸ ಕಾಯ್ದೆಯನ್ನು 'ಪಿ.ಎಂ ಗತಿಶಕ್ತಿ' ಯೋಜನೆಗೆ ಜೋಡಿಸಿರುವುದರಿಂದ, ದೊಡ್ಡ ರಸ್ತೆಗಳು ಮತ್ತು ಹೈವೆಗಳ ನಿರ್ಮಾಣಕ್ಕೆ ಬಳಕೆಯಾಗುತ್ತಿದ್ದು, ಇದು ಪರೋಕ್ಷವಾಗಿ ಗುತ್ತಿಗೆದಾರರು ಮತ್ತು ಕಾರ್ಪೊರೇಟ್ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆಯಾಗಿ ಮಾರ್ಪಟ್ಟಿದೆ. ಇದು ಬಡವರ ಕೈಯಿಂದ ಅನ್ನ ಕಸಿದುಕೊಂಡು ಉಳ್ಳವರನ್ನು ಇನ್ನಷ್ಟು ಶ್ರೀಮಂತರನ್ನಾಗಿ ಮಾಡುವ ಯೋಜನೆಯಾಗಿದೆ.