ಚಿಟಗುಪ್ಪ: ಪಡಿತರ ವಿತರಣೆಯಲ್ಲಿ ಪಾರದರ್ಶಕತೆ ಮತ್ತು ಸಮಯೋಚಿತ ಸೇವೆ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದ್ದು, ಈ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಎಚ್ಚರಿಸಿದರು.
ಪಡಿತರ ವಿತರಣೆಯ ವೇಳೆ ಸಾರ್ವಜನಿಕರಿಗೆ ಎದುರಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ತಾಲೂಕಿನ ಮಂಗಲಗಿ ಗ್ರಾಮದ ಪಡಿತರ ವಿತರಣಾ ಕೇಂದ್ರಕ್ಕೆ ಗುರುವಾರ ಬೀದರ್ ದಕ್ಷಿಣ ಕ್ಷೇತ್ರದ ಭೇಟಿ ನೀಡಿ ಪರಿಶೀಲಿಸಿದರು.
ಫಲಾನುಭವಿಗಳ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು. ಇದೇ ರೀತಿಯ ತೊಂದರೆಗಳು ಕ್ಷೇತ್ರದ ವಿವಿಧ ಭಾಗಗಳಲ್ಲಿಯೂ ಕಂಡು ಬರುತ್ತಿರುವುದು ತಿಳಿದ ಬಳಿಕ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಚರ್ಚಿಸಿ, ತಾಂತ್ರಿಕ ದೋಷಗಳನ್ನು ಶ್ರೀ ಸರಿಪಡಿಸಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಪ್ರಸ್ತುತ ಕೇಂದ್ರ ಸರ್ಕಾರದ ಎರಡು ತಿಂಗಳ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ಮಾತ್ರ ವಿತರಣೆ ಆಗುತ್ತಿದ್ದು, ರಾಜ್ಯ ಸರ್ಕಾರದ ಪಾಲಿನ ಅಕ್ಕಿ ಪೂರೈಕೆ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ರಾಜ್ಯ ಸರ್ಕಾರವು ವಿಳಂಬ ಮಾಡದೆ ತನ್ನ ಪಾಲಿನ ಅಕ್ಕಿ ವಿತರಣೆಯನ್ನು ತಕ್ಷಣ ಪುನರಾರಂಭಿಸಬೇಕು ಎಂದು ಆಗ್ರಹಿಸಿದರು.
ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವುದು ತಮ್ಮ ಮೊದಲ ಆದ್ಯತೆಯಾಗಿದ್ದು, ಸಾರ್ವಜನಿಕರ ಹಿತಾಸಕ್ತಿಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕರು ತಿಳಿಸಿದರು. ಗ್ರಾಮಸ್ಥರು, ಪಡಿತರ ಚೀಟಿದಾರರು ಇದ್ದರು.