ವಿಮಾನ ನಿಲ್ದಾಣ ಸುತ್ತಮುತ್ತಲ ನಿರ್ಬಂಧ ಸಡಿಲಿಸಿ

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ
Published on
ನವದೆಹಲಿ: ಬೆಂಗಳೂರಿನಲ್ಲಿ ರಕ್ಷಣಾ ಇಲಾಖೆ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ವಿಧಿಸಲಾಗಿರುವ ಕಟ್ಟಡಗಳ ಎತ್ತರದ ನಿರ್ಬಂಧಗಳನ್ನು ಸಡಿಲ ಮಾಡಬೇಕೆಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
ರಕ್ಷಣ ಇಲಾಖೆಯ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ಕಟ್ಟಡಗಳಿಗೆ ವಿಧಿಸಿರುವ ನಿರ್ಬಂಧಗಳು ಬೆಂಗಳೂರಿನ ಪ್ರಗತಿಗೆ ಅಡ್ಡಿಯಾಗಿದೆ. ಸುರಕ್ಷತೆ ಹಾಗೂ ಪ್ರಗತಿಯ ವಿಚಾರವನ್ನು ಗಮನದಲ್ಲಿಟ್ಟುಕೊಂಡು ನಿರ್ಬಂಧಗಳನ್ನು ಸಡಿಲಗೊಳಿಸಿ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ರಕ್ಷಣಾ ಸಚಿವರೊಂದಿಗೆ ಮನವಿ ಮಾಡಿದ್ದಾರೆ.
ಬೆಂಗಳೂರಿನ ರಕ್ಷಣಾ ಇಲಾಖೆ ಸುಪರ್ದಿಯ ವಿಮಾನ ನಿಲ್ದಾಣಗಳ 20 ಕಿ.ಮೀ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ನಿರಾಕ್ಷೇಪಣಾ ಪತ್ರ ನೀಡುವಾಗ ವಿಮಾನ ನಿಲ್ದಾಣದ ಅಧಿಕಾರಿಗಳು ವಿಪರೀತ ನಿರ್ಬಂಧಗಳನ್ನು ವಿಧಿಸುತ್ತಿದ್ದಾರೆ.
ಬೆಂಗಳೂರು ವಿಶ್ವದ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ಎಚ್‌ಎಎಲ್ ವಿಮಾನ ನಿಲ್ದಾಣ ಬೆಂಗಳೂರಿನ ಹೃದಯ ಭಾಗದಲ್ಲಿದ್ದು, ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಬೇಡಿಕೆ ಇದೆ. ಹೆಚ್ಚುವರಿಯಾಗಿ ವಿಧಿಸಲಾಗಿರುವ ನಿರ್ಬಂಧಗಳು ಈ ಪ್ರದೇಶಗಳಲ್ಲಿ ಅಭಿವೃದ್ಧಿಗೆ ಅಡ್ಡಿಯಾಗಿವೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ಈ ವಿಚಾರವಾಗಿ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿಗಳು, ರಕ್ಷಣಾ ಸಚಿವಾಲಯದ ರಕ್ಷಣಾ ಉತ್ಪಾದನಾ ಇಲಾಖೆ ಕಾರ್ಯದರ್ಶಿಗಳು ಹಾಗೂ ರಕ್ಷಣಾ ಕಾರ್ಯದರ್ಶಿಗಳಿಗೆ ಪತ್ರಗಳನ್ನು ಬರೆಯಲಾಗಿದೆ. ವಿಮಾನ ಸುರಕ್ಷತೆ ಹಾಗೂ ನಗರದ ಅಭಿವೃದ್ಧಿ ಎರಡರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಪರಿಶೀಲನೆ ನಡೆಸಿ, ಎದುರಾಗಿರುವ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪ್ರಸ್ತುತ ಬೆಂಗಳೂರಿನಲ್ಲಿ 4 ವಿಮಾನ ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿವೆ. ಎಚ್‌ಎಎಲ್ ಹಾಗೂ ಯಲಹಂಕ ವಾಯುನೆಲೆ ರಕ್ಷಣಾ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಮಾಡಲು ವಿಮಾನ ನಿಲ್ದಾಣ ಅಧಿಕಾರಿಗಳಿಂದ ನಿರಾಕ್ಷೇಪಣ ಪತ್ರ ಪಡೆಯಬೇಕಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net