ಬೆಂಗಳೂರು: ರಾಜ್ಯದ ಮಾಜಿ ಲೋಕಾಯುಕ್ತ ಹಾಗೂ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ(Santosh Hegde) ಅವರು ಶುಕ್ರವಾರ ಸಂಜೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ವೇಳೆ ದಿಢೀರ್ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ಸದ್ಯ ಅವರನ್ನು ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಂತೋಷ್ ಹೆಗಡೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಜೆ ಸುಮಾರು 4:20ರ ಸುಮಾರಿಗೆ ವೇದಿಕೆಯಲ್ಲಿದ್ದಾಗಲೇ ಅವರು ತೀವ್ರ ಸುಸ್ತಿನಿಂದ ಕುಸಿದು ಬಿದ್ದರು. ಇದನ್ನು ಕಂಡು ಸಭಾಂಗಣದಲ್ಲಿದ್ದ ಗಣ್ಯರು ಹಾಗೂ ಸಾರ್ವಜನಿಕರು ಆತಂಕಕ್ಕೊಳಗಾದರು.
ಪ್ರಸ್ತುತ ಆರೋಗ್ಯ ಸ್ಥಿತಿ
ಸದ್ಯ ವಿಕ್ರಂ ಆಸ್ಪತ್ರೆಯ ವೈದ್ಯರು ಹೆಗಡೆ ಅವರಿಗೆ ತಪಾಸಣೆ ನಡೆಸುತ್ತಿದ್ದಾರೆ. ರಕ್ತದೊತ್ತಡದಲ್ಲಿನ ಏರುಪೇರು ಅಥವಾ ವಯೋಸಹಜ ಸುಸ್ತಿನಿಂದ ಅವರು ಅಸ್ವಸ್ಥರಾಗಿರಬಹುದು ಎಂದು ಶಂಕಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.