ಕಾಂಗ್ರೆಸ್​ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ವಿಧಿವಶ! ರಾಜಕೀಯ ಗಣ್ಯರಿಂದ ಸಂತಾಪ | passes away

ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ
ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ
Published on
ಬೆಂಗಳೂರು: ಕಾಂಗ್ರೆಸ್​ನ ಹಿರಿಯ ನಾಯಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (94)(Shamanur Shivashankarappa) ಅವರು ಇಂದು ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
6 ಬಾರಿ ಶಾಸಕರಾಗಿದ್ದ ಅವರು, ಕಳೆದ ಒಂದು ತಿಂಗಳಿನಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಕಾರಣ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಸಂಜೆ 6:45ಕ್ಕೆ ನಿಧನ ಹೊಂದಿದರು.
ರಾಜಕೀಯದಲ್ಲಿ ತಮ್ಮ ಹೆಸರನ್ನು ಬೇರೂರಿಸಿದ ನಾಯಕನ ಅಗಲಿಕೆಗೆ ರಾಜಕೀಯ, ಸಿನಿಮಾ ಸೇರಿ ಹಲವು ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ. ಹಾಲಿ ಶಾಸಕರಾಗಿರುವ ಕಾರಣ ಸೋಮವಾರ (ಡಿ.15) ವಿಧಾನಸಭೆ ಅಧಿವೇಶನದಲ್ಲಿ ಸಂತಾಪ ಸೂಚನೆ ನಡೆಯಲಿದ್ದು, ಕಲಾಪ ಒಂದು ದಿನದ ಮಟ್ಟಿಗೆ ಮೊಟಕುಗೊಳ್ಳಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಎಕ್ಸ್​ನಲ್ಲಿ ಸಂತಾಪ ಸೂಚಿಸಿದ್ದು, ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರು ಆದ ಶಾಮನೂರು ಶಿವಶಂಕರಪ್ಪ ಅವರ ನಿಧನವಾರ್ತೆ ನೋವುಂಟುಮಾಡಿದೆ.
ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅಪವಾದ, ಆರೋಪಗಳಿಂದ ದೂರವಿದ್ದು, ಸಿಕ್ಕ ಅಧಿಕಾರವನ್ನು ಜನಕಲ್ಯಾಣಕ್ಕಾಗಿಯೇ ಮುಡುಪಿಟ್ಟಿದ್ದ ಮುತ್ಸದ್ದಿ ನಾಯಕನ ಅಗಲಿಕೆಯಿಂದ ಸಮಾಜ ಬಡವಾಗಿದೆ. ದಾವಣಗೆರೆ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಿದ ಶಿವಶಂಕರಪ್ಪನವರ ಕಾರ್ಯಗಳು ಅವರನ್ನು ಜನಮಾನಸದಲ್ಲಿ ಚಿರಸ್ಥಾಯಿಯಾಗಿಸಲಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಮತ್ತವರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂತಾಪ

ಡಿಸಿಎಂ ಡಿ.ಕೆ.ಶಿವಕುಮಾರ್ ಸಹ ಎಕ್ಸ್​ನಲ್ಲಿ, ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು.
ಸಮಾಜ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶಿವಶಂಕರಪ್ಪನವರು ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದರು. ಅವರ ಅಗಲಿಕೆಯು ನಾಡಿಗೆ ಹಾಗೂ ಕಾಂಗ್ರೆಸ್‌ ಪಕ್ಷಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗಕ್ಕೆ, ಬೆಂಬಲಿಗರಿಗೆ ಈ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net