ರಾಜೀನಾಮೆ ನೀಡಿದ ಬೆನ್ನಲ್ಲೇ ರಾಹುಲ್, ಖರ್ಗೆ ಭೇಟಿಯಾದ Siddaramaiah: ಪುತ್ರ ಯತೀಂದ್ರಗೆ ಡಿಸಿಎಂ ಹುದ್ದೆ ಬೇಡಿಕೆ?

Siddaramaiah
Siddaramaiah
Published on
ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಹಿರಿಯ ನಾಯಕ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಶುಕ್ರವಾರ ಬೆಳ್ಳಂಬೆಳಗ್ಗೆ ಸೋನಿಯಾ ಗಾಂಧಿ ಅವರ ನಿವಾಸ ‘10 ಜನಪಥ್’ಗೆ ಭೇಟಿ ನೀಡಿದ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಹತ್ವದ ಮಾತುಕತೆ ನಡೆಸಿದರು. ಈ ವೇಳೆ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಕೂಡ ಉಪಸ್ಥಿತರಿದ್ದರು.
ರಾಜೀನಾಮೆ ಬಳಿಕ ಸಿದ್ದರಾಮಯ್ಯ ಅವರ ಮುಂದಿನ ರಾಜಕೀಯ ನಡೆ ಏನು? ರಾಜ್ಯ ರಾಜಕೀಯದಲ್ಲಿ ಅವರ ಸ್ಥಾನಮಾನವೇನು? ಎಂಬ ಕುತೂಹಲಗಳ ನಡುವೆ ನಡೆದಿರುವ ಈ ಭೇಟಿ ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಮೂಲಗಳ ಪ್ರಕಾರ, ಈ ಸಭೆಯಲ್ಲಿ ಸೋನಿಯಾ ಗಾಂಧಿ ಅವರು ಉಪಸ್ಥಿತರಿರಲಿಲ್ಲ, ಕೇವಲ ರಾಹುಲ್ ಗಾಂಧಿ ಅವರೊಂದಿಗೆ ಮಾತ್ರ ಸಿದ್ದರಾಮಯ್ಯ ಸುದೀರ್ಘ ಚರ್ಚೆ ನಡೆಸಿದ್ದಾರೆ.

ಹೈಕಮಾಂಡ್ ಆಫರ್ ತಿರಸ್ಕರಿಸಿದ ಸಿದ್ದು!

ರಾಜ್ಯಕ್ಕೆ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ರಾಹುಲ್ ಗಾಂಧಿ ಅವರಿಗೆ ಧನ್ಯವಾದ ಅರ್ಪಿಸಿದ ಸಿದ್ದರಾಮಯ್ಯ, ‘ಹೈಕಮಾಂಡ್ ಸೂಚನೆಯಂತೆಯೇ ನಾನು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ’ ಎಂದು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಪಕ್ಷದ ವರಿಷ್ಠರು ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸೀಟು ನೀಡಿ ಕೇಂದ್ರ ರಾಜಕಾರಣಕ್ಕೆ ಕರೆತರಲು ಒಲವು ತೋರಿದ್ದರು. ಆದರೆ ಸಿದ್ದರಾಮಯ್ಯ ಅವರು ಈ ಆಫರ್ ಅನ್ನು ಖಡಾಖಂಡಿತವಾಗಿ ತಿರಸ್ಕರಿಸಿದ್ದಾರೆ. ತಮಗೆ ದೆಹಲಿ ರಾಜಕಾರಣದಲ್ಲಿ ಆಸಕ್ತಿಯಿಲ್ಲ, ಕರ್ನಾಟಕದಲ್ಲೇ ಉಳಿದು ಕೆಲಸ ಮಾಡಲು ಬಯಸುವುದಾಗಿ ಹೈಕಮಾಂಡ್‌ಗೆ ತಿಳಿಸಿದ್ದಾರೆ.

ಪುತ್ರ ಯತೀಂದ್ರಗೆ ಡಿಸಿಎಂ ಪಟ್ಟ? 

ಈ ಹೈವೋಲ್ಟೇಜ್ ಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಮುಂದಿನ ರಾಜಕೀಯ ಭವಿಷ್ಯಕ್ಕಿಂತ ಹೆಚ್ಚಾಗಿ, ತಮ್ಮ ಪುತ್ರ ಮತ್ತು ನಿಷ್ಠಾವಂತರ ಭವಿಷ್ಯದ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಹೊಸದಾಗಿ ರಚನೆಯಾಗಲಿರುವ ಕರ್ನಾಟಕದ ಸಚಿವ ಸಂಪುಟದಲ್ಲಿ ತಮ್ಮ ಪುತ್ರ ಯತೀಂದ್ರ ಅವರಿಗೆ ಉಪಮುಖ್ಯಮಂತ್ರಿ (DCM) ಹುದ್ದೆ ನೀಡಬೇಕು ಹಾಗೂ ತಮ್ಮ ಬಣದ ನಿಷ್ಠಾವಂತ ಶಾಸಕರಿಗೆ ಪ್ರಮುಖ ಖಾತೆಗಳನ್ನು ನೀಡಬೇಕು ಎಂದು ರಾಹುಲ್ ಗಾಂಧಿ ಮುಂದೆ ಸಿದ್ದರಾಮಯ್ಯ ಬೇಡಿಕೆ ಇಟ್ಟಿದ್ದಾರೆ ಎಂದು ವರದಿಯಾಗಿದೆ.
ರಾಹುಲ್ ಗಾಂಧಿ ಭೇಟಿಯ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಹೊಸ ಸರ್ಕಾರ ರಚನೆ ಹಾಗೂ ಪಕ್ಷದ ಸಂಘಟನೆಯ ಬಗ್ಗೆ ಮಹತ್ವದ ಆಲೋಚನೆಗಳನ್ನು ಹಂಚಿಕೊಂಡಿದ್ದಾರೆ.

ನಾಳೆ ಸಿಎಲ್‌ಪಿ ಸಭೆ: ಡಿ.ಕೆ. ಶಿವಕುಮಾರ್ ಮುಂದಿನ ಸಿಎಂ?

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಅಧಿಕೃತವಾಗಿ ಅಂಗೀಕರಿಸಿದ್ದರು. ಇದರ ಬೆನ್ನಲ್ಲೇ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಪ್ರಸ್ತುತ ಡಿ.ಕೆ. ಶಿವಕುಮಾರ್ ಅವರು ಕೂಡ ದೆಹಲಿಗೆ ಆಗಮಿಸಲಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಹೊಸ ಸರ್ಕಾರ ರಚನೆಯ ಬಗ್ಗೆ ಪ್ರತ್ಯೇಕ ಮಾತುಕತೆ ನಡೆಸಲಿದ್ದಾರೆ. ಶನಿವಾರ (ಮೇ 30) ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆ ಕರೆಯಲಾಗಿದ್ದು, ಅಲ್ಲಿ ಹೊಸ ಮುಖ್ಯಮಂತ್ರಿಯ ಆಯ್ಕೆ ಅಧಿಕೃತವಾಗಿ ಪ್ರಕಟವಾಗಲಿದೆ.
2006ರಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಸಿದ್ದರಾಮಯ್ಯ ಅವರು ರಾಜ್ಯದ ಪ್ರಭಾವಿ ನಾಯಕರಾಗಿ ಬೆಳೆದು ಎರಡು ಬಾರಿ ಮುಖ್ಯಮಂತ್ರಿಯಾಗಿ ಯಶಸ್ವಿ ಆಡಳಿತ ನೀಡಿದ್ದಾರೆ. ಇದೀಗ ಅವರು ಸಿಎಂ ಸ್ಥಾನದಿಂದ ಕೆಳಗಿಳಿದಿರುವುದು ರಾಜ್ಯ ಕಾಂಗ್ರೆಸ್‌ನಲ್ಲಿ ಹೊಸ ಪರ್ವಕ್ಕೆ ಮುನ್ನುಡಿ ಬರೆದಿದೆ,(ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net