ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ಮುಂದುವರಿಸಿರುವ ಸುಪ್ರೀಂ ಕೋರ್ಟ್, ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 10ಕ್ಕೆ ಮುಂದೂಡಿಕೆ ಮಾಡಿದೆ.
ಶಾಸಕ ರಾಜೇಗೌಡ ಸಲ್ಲಿಸಿದ್ದ ಮೆಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆಯನ್ನು ಮುಂದೂಡಿಕೆ ಮಾಡಿದ್ದು, ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಲು ಬಿಜೆಪಿ ಅಭ್ಯರ್ಥಿ ಡಿಎನ್. ಜೀವರಾಜ್ಗೆ ಅವಕಾಶ ನೀಡಿದೆ.
ಏನಿದು ಪ್ರಕರಣ?
2023ರ ವಿಧಾನಸಭಾ ಚುನಾವಣೆಯಲ್ಲಿ ರಾಜೇಗೌಡ, ಜೀವರಾಜ್ ವಿರುದ್ಧ ಗೆಲುವು ಸಾಧಿಸಿದ್ದರು. ಈ ಫಲಿತಾಂಶವನ್ನು ಪ್ರಶ್ನಿಸಿ ಜೀವರಾಜ್ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ನಡೆಸಲಾಗಿತ್ತು. ಮರು ಎಣಿಕೆ ಬಳಿಕ ಫಲಿತಾಂಶದಲ್ಲಿ ಬದಲಾವಣೆಯಾಗಿದ್ದು, ಜೀವರಾಜ್ ರನ್ನು ವಿಜೇತ ಅಭ್ಯರ್ಥಿ ಎಂದು ಘೋಷಿಸಲಾಗಿತ್ತು.
ಮರು ಎಣಿಕೆ ಪ್ರಕ್ರಿಯೆ ಹಾಗೂ ಫಲಿತಾಂಶವನ್ನು ಪ್ರಶ್ನಿಸಿ ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಮೇ ತಿಂಗಳಲ್ಲಿ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಮರು ಎಣಿಕೆ ಫಲಿತಾಂಶಕ್ಕೆ ತಡೆ ನೀಡಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿತ್ತು.
ಇದೀಗ ಮಧ್ಯಂತರ ಆದೇಶವನ್ನು ಮುಂದಿನ ವಿಚಾರಣೆವರೆಗೂ ಮುಂದುವರಿಸಿರುವ ಸುಪ್ರೀಂ ಕೋರ್ಟ್, ಅಲ್ಲಿಯವರೆಗೆ ರಾಜೇಗೌಡ ಶಾಸಕರಾಗಿಯೇ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದೆ, (ಏಜೆನ್ಸೀಸ್).