ವಿಜಯಪುರದಲ್ಲಿ ಪ್ರಥಮ ಬಾರಿಗೆ ಬ್ಯಾಡ್ಮಿಂಟನ್ ಟೂರ್ನಿ ಆಯೋಜನೆಗೆ ಅಗತ್ಯ ಸಹಕಾರ ನೀಡಬೇಕು ಎಂದು ಈಗಾಗಲೇ ಸಿಎಂ ಸಿದ್ದರಾಮಯ್ಯ, ಸಚಿವ ಎಂ.ಬಿ. ಪಾಟೀಲ ಹಾಗೂ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಮತ್ತು ಜಿಲ್ಲಾಡಳಿತ ಸೇರಿ ಸ್ಥಳೀಯ ಕ್ರೀಡಾ ಸಂಘಟನೆಗಳಿಗೆ ಮನವಿ ಮಾಡಲಾಗಿದೆ ಎಂದು ವಿವರಿಸಿದರು. ರಾಜ್ಯದಲ್ಲಿ ಇದುವರೆಗೆ ಕೇವಲ ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಮಾತ್ರ ಬ್ಯಾಡ್ಮಿಂಟನ್ ಟೂರ್ನಿ ಆಯೋಜಿಸಲಾಗುತ್ತಿತ್ತು. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಮೂಲಸೌಲಭ್ಯಗಳಿಲ್ಲ ಎಂಬ ಕಾರಣಕ್ಕೆ ಟೂರ್ನಿ ಆಯೋಜಿಸಲು ಸಾಧ್ಯವಾಗಿರಲಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಬ್ಯಾಡ್ಮಿಂಟನ್ ಉತ್ತೇಜನ ನೀಡಬೇಕು ಎಂಬ ಉದ್ದೇಶದಿಂದ ಪ್ರಥಮ ಬಾರಿಗೆ ವಿಜಯಪುರದಲ್ಲಿ ಟೂರ್ನಮೆಂಟ್ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.