ಚಿಂಚೋಳಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಬಸವರಾಜ ಮಾಲಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಂತೋಷಕುಮಾರ ಚವ್ಹಾಣ್ ಇತರರಿದ್ದರು.
ಚಿಂಚೋಳಿ: ಕ್ಷೇತ್ರದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಉಂಟಾಗದಂತೆ ಎಚ್ಚರವಹಿಸಬೇಕು. ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಸಿಲಿಂಡರ್ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳಿದ್ದು, ಕಡಿವಾಣ ಹಾಕಲು ಮುಂದಾಗಬೇಕು ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯ ಬಸವರಾಜ ಮಾಲಿ ಸೂಚನೆ ನೀಡಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡ ಪಂಚ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ಯಾಸ್ ಏಜೆನ್ಸಿಗಳು ಕೃತಕ ಅಭಾವ ಸೃಷ್ಟಿಸಿ ದಲ್ಲಾಳಿಗಳ ಮೂಲಕ ಅಧಿಕ ಬೆಲೆಗೆ ಸಿಲಿಂಡರ್ ಮಾರಾಟ ಮಾಡುತ್ತಿವೆ ಎಂದು ಹೇಳಲಾಗುತ್ತಿದೆ. ಆಹಾರ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು, ಏಜೆನ್ಸಿಗಳಿಂದ ನಿರಂತರ ದಾಸ್ತಾನು ಕುರಿತು ಮಾಹಿತಿ ಪಡೆಯಬೇಕು. ಬ್ಲಾಕ್ ಅಲ್ಲಿ ಮಾರಾಟ ಮಾರಿವುದು ಕಂಡುಬಂದರೆ ಕೂಡಲೇ ಕ್ರಮಕ್ಕೆ ಮುಂದಾಗಬೇಕು ಎಂದು ತಾಕೀತು ಮಾಡಿದರು.