ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡು, ಸಮಸ್ಯೆ ಕಂಡು ಬಂದರೆ ಕೂಡಲೇ ಸ್ಪಂದಿಸುವಂತೆ ಗ್ರಾಪಂ ಪಿಡಿಒಗಳು, ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.
ನಗರಸಭೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಆಡಳಿತಾಧಿಕಾರಿಗಳು, ಪಿಡಿಒಗಳು, ತಾಲೂಕುಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕು ವ್ಯಾಪ್ತಿಯ ಗ್ರಾಪಂ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆ ಕುರಿತು ಚರ್ಚಿಸಲಾಗಿದೆ ಎಂದರು.
ತಾಯಂದಿರು, ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ನೀರಿನ ಸಮಸ್ಯೆ ಗಮನಕ್ಕೆ ಬಂದ ತಕ್ಷಣ ಅಗತ್ಯ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಅನಧಿಕೃತ ಲೇಔಟ್ಗಳಲ್ಲಿ ಬಡವರು ಮಧ್ಯವರ್ತಿಗಳ ಮೂಲಕ ನಿವೇಶನ ಖರೀದಿಸಿ ಮೋಸ ಹೋಗುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪಿಡಿಒಗಳಿಗೆ ಸೂಚಿಸಲಾಗಿದೆ. ಬೋಗಸ್ ದಾಖಲೆ ಸೃಷ್ಟಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
ಗ್ರಾಪಂ ವ್ಯಾಪ್ತಿಯಲ್ಲಿ ಬಾಕಿ ಇರುವ ಕಂದಾಯ ವಸೂಲಿ ಮಾಡುವ ಕುರಿತು ಚರ್ಚಿಸಲಾಯಿತು. ಎಲ್ಲ ಗ್ರಾಪಂಗಳಲ್ಲೂ ಯುವ ಸಂಘಟನೆಗಳನ್ನು ರಚಿಸುವ ಮೂಲಕ ಸಮಾಜ ಸೇವೆ, ಸರ್ಕಾರದ ವಿವಿಧ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಸಹಕಾರಿಯಾಗುವಂತೆ ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಲಾಗಿದೆ ಎಂದರು.
ಬರ ಪರಿಸ್ಥಿತಿ, ಗ್ರಾಪಂಗಳಲ್ಲಿ ನಿಮಾರ್ಣವಾಗುತ್ತಿರುವ ಕಟ್ಟಡಗಳು, ಖಾತೆ, ಇ&-ಸ್ವತ್ತು, ಮ್ಯುಟೇಷನ್ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಲಾಗಿದೆ. ಕೇಂದ್ರ ಸರ್ಕಾರದ ಹೊಸ ಯೋಜನೆಯಡಿ ಈ ಹಿಂದೆ ನರೇಗಾ ಮೂಲಕ ಕೈಗೊಂಡಿದ್ದ ಕಾಮಗಾರಿಗಳನ್ನು ಮುಂದುವರಿಸುವ ಅವಕಾಶವಿದ್ದು, ಅದನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಶಾಸಕರು ಹೇಳಿದರು.