ದೊಡ್ಡಬಳ್ಳಾಪುರ : ಗ್ರಾಮಗಳಲ್ಲಿ ಕುಡಿಯುವ ನೀರು, ಚರಂಡಿ ಸೇರಿ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಶಾಸಕ ಧೀರಜ್ ಮುನಿರಾಜು ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ಭಕ್ತರಹಳ್ಳಿ ಗ್ರಾಪಂನಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರು, ರಸ್ತೆ, ಚರಂಡಿ, ಸ್ವಚ್ಛತೆ ಸೇರಿ ಮೂಲಸೌಕರ್ಯಗಳ ಸ್ಥಿತಿಗತಿ ಕುರಿತು ಚರ್ಚಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗ್ರಾಪಂ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳ ಪ್ರಗತಿ ವಿವರ ಹಾಗೂ ಜನರಿಗೆ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ತಲುಪುತ್ತಿರುವ ಕುರಿತು ಸಮಗ್ರವಾಗಿ ಪರಿಶೀಲಿಸಿ, ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳುವ ಜತೆಗೆ ನಿಗದಿತ ಸಮಯಕ್ಕೆ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.
ಜನರ ಸಮಸ್ಯೆಗೆ ಸ್ಪಂದಿಸಿ : ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಶೀಘ್ರ ಸ್ಪಂದಿಸಬೇಕು. ಯಾವುದೇ ಸೌಲಭ್ಯ ಪಡೆಯಲು ಕಚೇರಿ ಅಲೆದಾಡುವುದನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಗ್ರಾಪಂ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕಚೇರಿಯಲ್ಲಿ ಹಾಜರಿದ್ದು, ಸಾರ್ವಜನಿಕರ ಕೆಲಸಕ್ಕೆ ಆದ್ಯತೆ ನೀಡಬೇಕು. ಮೂಲ ಸೌಕರ್ಯಗಳಿಗೆ ಎಲ್ಲಿಯೂ ಸಮಸ್ಯೆ ಕಂಡುಬರದಂತೆ ಎಚ್ಚರವಹಿಸಬೇಕು. ಮುಂಗಾರು ಅವಧಿಯಲ್ಲಿ ಮಳೆ ಕೊರತೆಯಿದ್ದು, ಎಲ್ಲ ಗ್ರಾಮಗಳಲ್ಲೂ ಕುಡಿಯುವ ನೀರಿನ ಸಮಸ್ಯೆ ತಲೆದೂರದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.