ಯುವಜನರು ಮಾದಕ ವಸ್ತುಗಳಿಂದ ದೂರವಿರಲಿ

ಮಂಗಲ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ರಂಜಿತ್‌ಕುಮಾರ್, ನಾಗರಾಜು, ಬಸವರಾಜು, ರವಿ ಇತರರು ಭಾಗವಹಿಸಿದ್ದರು.
ಮಂಗಲ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ರಂಜಿತ್‌ಕುಮಾರ್, ನಾಗರಾಜು, ಬಸವರಾಜು, ರವಿ ಇತರರು ಭಾಗವಹಿಸಿದ್ದರು.
Published on
ಹನೂರು: ಯುವ ಜನರ ಭವಿಷ್ಯ ಹಾಳು ಮಾಡುವ ಮಾದಕ ವಸ್ತುಗಳ ಸೇವನೆಯಿಂದ ಪ್ರತಿಯೊಬ್ಬರೂ ದೂರವಿರಬೇಕು ಎಂದು ಅಪರ ಸಿವಿಲ್ ನ್ಯಾಯಾಧೀಶ ಎಂ.ರಂಜಿತ್‌ಕುಮಾರ್ ತಿಳಿಸಿದರು.

ತಾಲೂಕಿನ ಮಂಗಲ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಬುಧವಾರ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಅಭಿಯೋಜನಾ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಜನರು ಅದರಲ್ಲೂ ಯುವ ಪೀಳಿಗೆ ಮಾದಕ ವಸ್ತುಗಳ ಸೇವನೆಗೆ ಒಳಗಾಗುತ್ತಿದ್ದಾರೆ. ಇದರಿಂದ ಭವಿಷ್ಯದ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮಾದಕ ವಸ್ತುಗಳ ಸೇವನೆ ಹಾಗೂ ಮಾರಾಟ ಮಾಡುವುದು ಕಾನೂನಿನಡಿ ಅಪರಾಧ. ಆದ್ದರಿಂದ ಈ ಬಗ್ಗೆ ಜಾಗೃತಿ ಮೂಡಿಸಬೇಕಾದದ್ದು, ಅಗತ್ಯವಾಗಿದೆ. ಇದನ್ನು ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಳ್ಳಬೇಕಿದೆ. ಪಾಲಕರು ಮಕ್ಕಳ ಚಲನ ವಲನದ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನ ನೀಡಬೇಕು ಎಂದು ತಿಳಿಸಿದರು.

ಹಿರಿಯ ವಕೀಲ ನಾಗರಾಜು ಮಾತನಾಡಿ, ಮಕ್ಕಳ ಮೇಲಿನ ದೌರ್ಜನ್ಯ, ಕಿರುಕುಳ ಹಾಗೂ ಶೋಷಣೆಯಿಂದ ರಕ್ಷಿಸಲು ಹಾಗೂ ಅಪರಾಧಿಗಳಿಗೆ ಶಿಕ್ಷೆ ವಿಧಿಸುವ ಸಲುವಾಗಿ ಸರ್ಕಾರ 2012ರಲ್ಲಿ ಪೋಕ್ಸೋ ಕಾಯ್ದೆ ಜಾರಿಗೆ ತಂದಿದೆ. ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರು ದೂರು ಸಲ್ಲಿಸಬಹುದಾಗಿದ್ದು, ಸಂಬಂಧಪಟ್ಟವರು ಶಿಕ್ಷೆಗೆ ಗುರಿಪಡಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಸ್.ಬಸವರಾಜು, ಸಹಾಯಕ ಸರ್ಕಾರಿ ಅಭಿಯೋಜಕ ರವಿ, ಪ್ರಾಂಶುಪಾಲ ಶ್ಯಾಮ್‌ಲಾಲ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net