ಔಷಧ ಮೂಲ ಬೆಲೆ ಪ್ರಕಟಿಸುವ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಖಾಸಗಿ ಆಸ್ಪತ್ರೆಗಳು: private hospitals

ಖಾಸಗಿ ಆಸ್ಪತ್ರೆಗಳು ಮತ್ತು ಆರೋಗ್ಯ ಸಂಸ್ಥೆಗಳಲ್ಲಿ ನ.1ರಿಂದ ಜಾರಿಯಾಗುವಂತೆ ಔಷಧಗಳು, ವೈದ್ಯಕೀಯ ಉಪಕರಣಗಳು ಮತ್ತು ಬಳಕೆಯ ವಸ್ತುಗಳ ’ಲ್ಯಾಂಡಿಂಗ್ ಬೇಸ್ ಪ್ರೈಸ್’ (ಆಮದು/ಖರೀದಿ ಮೂಲ ಬೆಲೆ) ಬಹಿರಂಗಪಡಿಸುವುದನ್ನು ಕಡ್ಡಾಯಗೊಳಿಸಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಆಯುಕ್ತರು ಅ.1ರಂದು ಹೊರಡಿಸಿರುವ ಸುತ್ತೋಲೆಯನ್ನು ಖಾಸಗಿ ಆಸ್ಪತ್ರೆಗಳು ಪ್ರಶ್ನಿಸಿವೆ.
Karnataka High court
ಹೈಕೋರ್ಟ್ Google
Published on: 

ಬೆಂಗಳೂರು: ಔಷಧ, ವೈದ್ಯಕೀಯ ಉಪಕರಣಗಳು ಮತ್ತು ಬಳಕೆಯ ವಸ್ತುಗಳ ಮೂಲ ದರವನ್ನು ಬಹಿರಂಗವಾಗಿ ಪ್ರಕಟಿಸುವುದನ್ನು ಕಡ್ಡಾಯಗೊಳಿಸಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಖಾಸಗಿ ಆಸ್ಪತ್ರೆಗಳು ಹೈಕೋರ್ಟ್ ಮೆಟ್ಟಿಲೇರಿವೆ.

ಖಾಸಗಿ ಆಸ್ಪತ್ರೆಗಳು ಮತ್ತು ಆರೋಗ್ಯ ಸಂಸ್ಥೆಗಳಲ್ಲಿ ನ.1ರಿಂದ ಜಾರಿಯಾಗುವಂತೆ ಔಷಧಗಳು, ವೈದ್ಯಕೀಯ ಉಪಕರಣಗಳು ಮತ್ತು ಬಳಕೆಯ ವಸ್ತುಗಳ ’ಲ್ಯಾಂಡಿಂಗ್ ಬೇಸ್ ಪ್ರೈಸ್’ (ಆಮದು/ಖರೀದಿ ಮೂಲ ಬೆಲೆ) ಬಹಿರಂಗಪಡಿಸುವುದನ್ನು ಕಡ್ಡಾಯಗೊಳಿಸಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಆಯುಕ್ತರು ಅ.1ರಂದು ಹೊರಡಿಸಿರುವ ಸುತ್ತೋಲೆಯನ್ನು ಖಾಸಗಿ ಆಸ್ಪತ್ರೆಗಳು ಪ್ರಶ್ನಿಸಿವೆ.

ಈ ವಿಚಾರವಾಗಿ ಖಾಸಗಿ ಆಸ್ಪತ್ರೆಗಳ ಪರವಾಗಿ ಪ್ರೈವೇಟ್ ಹಾಸ್ಪಿಟಲ್ಸ್ ಆ್ಯಂಡ್ ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್ ಡಾ. ಶೋಭಾ ಪ್ರಕಾಶ್, ಪ್ರಿಸ್ಟೈನ್ ಹಾಸ್ಪಿಟಲ್ಸ್ ಆೃಂಡ್ ರಿಸರ್ಚ್ ಸೆಂಟರ್ ಪ್ರೈ. ಲಿ. ವೈದ್ಯ ಡಾ. ಹಾಲಗೆರೆ ಮಲ್ಲಿಕಾರ್ಜುನ ಪ್ರಸನ್ನ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.

ಈ ವೇಳೆ ಸರ್ಕಾರದ ಪರ ವಕೀಲರು, ಸುತ್ತೋಲೆಯನ್ನು ಸರ್ಕಾರದ ಮಟ್ಟದಲ್ಲಿ ಪರಿಶೀಲಿಸುವ ಸಾಧ್ಯತೆಯಿದೆ. ಆದ್ದರಿಂದ ಒಂದು ದಿನದ ಮಟ್ಟಿಗೆ ಅರ್ಜಿ ವಿಚಾರಣೆಯನ್ನು ಮುಂದೂಡಬೇಕು ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಾಲಯ, ಸರ್ಕಾರದ ನಿಲುವು ತಿಳಿಸುವಂತೆ ಹೆಚ್ಚುವರಿ ಸರ್ಕಾರಿ ವಕೀಲರಿಗೆ ಸೂಚಿಸಿತು. ಸರ್ಕಾರದ ನಿಲುವು ತಿಳಿದ ಬಳಿಕ ಸುತ್ತೋಲೆಗೆ ತಡೆ ನೀಡಬೇಕು ಎಂಬ ಅರ್ಜಿದಾರರ ಮಧ್ಯಂತರ ಮನವಿಯನ್ನು ಪರಿಗಣಿಸಲಾಗುವುದು ಎಂದು ಹೇಳಿತು. ಅಲ್ಲದೆ, ಅರ್ಜಿ ಸಂಬಂಧ ರಾಜ್ಯ ಸರ್ಕಾರ, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಆಯುಕ್ತರು, ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಅ.30 (ಶುಕ್ರವಾರಕ್ಕೆ) ಮುಂದೂಡಿತು.