

ಬೆಂಗಳೂರು: ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ ಅವರನ್ನು ನಿಂದಿಸಿದ್ದಾರೆ ಎಂಬ ಆರೋಪದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಅಲ್ಲದೆ, ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಹಾಗೂ ದೂರುದಾರರಿಗೆ ತುರ್ತು ನೋಟಿಸ್ ಜಾರಿಗೊಳಿಸಿದೆ.
ಈ ಕುರಿತಾಗಿ ತಮ್ಮ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್ ರದ್ದುಗೊಳಿಸುವಂತೆ ಶಾಸಕ ಯತ್ನಾಳ್ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ವಕೀಲ ಪಿ. ವೆಂಕಟೇಶ್ ದಳವಾಯಿ ವಾದ ಮಂಡಿಸಿ, ಯತ್ನಾಳ್ ಅವರ ಹೇಳಿಕೆಯಲ್ಲಿ ದ್ವೇಷಪೂರಿತ ಅಂಶಗಳಿರಲಿಲ್ಲ. ಧರ್ಮ- ಧರ್ಮಗಳ ವಿರುದ್ಧ ವೈಷಮ್ಯ ಬಿತ್ತುವ ಉದ್ದೇಶವನ್ನು ಅವರು ಹೊಂದಿಲ್ಲ. ಬದಲಿಗೆ ರಾಜಕೀಯ ಪ್ರೇರಿತವಾಗಿ ಅರ್ಜಿದಾರರ ವಿರುದ್ಧ ದೂರು ದಾಖಲಿಸಲಾಗಿದೆ. ಹಾಗಾಗಿ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಮನವಿ ಮಾಡಿದರು.
ವಾದ ಆಲಿಸಿದ ನ್ಯಾಯಪೀಠ ಅರ್ಜಿದಾರರ ವಿರುದ್ಧ ಎಫ್‌ಐಆರ್ ಗೆ ಮಧ್ಯಂತರ ತಡೆ ವಿಧಿಸಿದೆ.ಅಲ್ಲದೆ, ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಸೇರಿ ಹಾಗೂ ದೂರುದಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರಿಗೆ ತುರ್ತು ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ನ. 7 ಕ್ಕೆ ಮುಂದೂಡಿದೆ.
ಏನಿದು ಪ್ರಕರಣ ?
ಇತ್ತೀಚೆಗೆ ಅಮೇರಿಕಾಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಅವರು, ಭಾರತದಲ್ಲಿ ಸಮಾನತೆಯ ಸ್ಥಿತಿ ಮೂಡಿದ ನಂತರ ಮೀಸಲಾತಿ ವ್ಯವಸ್ಥೆಯ ರದ್ದತಿ ಕುರಿತು ಕಾಂಗ್ರೆಸ್ ಪಕ್ಷ ಚಿಂತಿಸಲಿದೆ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಖಂಡಿಸಿದ್ದ ಬಸನಗೌಡ ಪಾಟೀಲ್ ಯತ್ನಾಳ್ ರಾಹುಲ್ ಗಾಂಧಿ ಮುಸ್ಲಿಮರಿಗೆ ಹುಟ್ಟಿದ್ದಾನೋ, ಕ್ರೈಸ್ತರಿಗೆ ಹುಟ್ಟಿದ್ದಾನೋ. ಯಾವ ಜಾತಿಯಲ್ಲಿ ಹುಟ್ಟಿದ್ದಾನೆ ಎಂಬುವುದು ತನಿಖೆ ಆಗಬೇಕು.
ಜನಿವಾರ ಹಾಕಿದ ಬ್ರಾಹ್ಮಣ ಅಂತ ತಿಳಿದುಕೊಂಡಿದ್ದಾನೆ. ರಾಹುಲ್ ಗಾಂಧಿ ಅಪ್ಪ ಬೇರೆ, ಅವ್ವ ಇಟಲಿಯಾಕಿ. ಅಪ್ಪ ಮೊಘಲರ ಕೈಲಿ ಕೆಲಸ ಮಾಡಿದವ. ಮರಿ ಮೊಮ್ಮಗ ರಾಹುಲ್ ಕಂಟ್ರಿ ಪಿಸ್ತೂಲ್ ಇದ್ದಂಗೆ. ರಾಹುಲ್ ಗಾಂಧಿಯಿಂದ ಉದ್ದಾರ ಆಗಲ್ಲ ಎಂದು ಯತ್ನಾಳ್ ಹೇಳಿದ್ದರು.
ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ( ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರು ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಸಂಬಂಧ ದಾಖಲಾದ ಎ್ಐಆರ್ ರದ್ದುಗೊಳಿಸುವಂತೆ ಕೋರಿ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು.