ಮೊಬೈಲ್, ಟಿವಿಯಿಂದ ದೂರವಿರಿ

sor
ಸೊರಬ ತಾಲೂಕಿನ ಚನ್ನಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯಲ್ಲಿ ಮುಖ್ಯ ಶಿಕ್ಷಕ ಹಾಲೇಶ್, ಶಿಕ್ಷಕಿ ಸೌಭಾಗ್ಯವತಿ ಇದ್ದರು.
Published on

ಸೊರಬ: ದೇಶದ ಮೊದಲ ಉಪ ರಾಷ್ಟ್ರಪತಿ, ಶಿಕ್ಷಣ ತಜ್ಞ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತಿದೆ. ಅವರ ಜೀವನ ಮತ್ತು ಚಿಂತನೆಗಳನ್ನು ಸ್ಮರಿಸಬೇಕು ಎಂದು ಮುಖ್ಯಶಿಕ್ಷಕ ಹಾಲೇಶ್ ನವುಲೆ ಹೇಳಿದರು.

ಶುಕ್ರವಾರ ತಾಲೂಕಿನ ಚನ್ನಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಮಕ್ಕಳ ಭವಿಷ್ಯದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಥಮಿಕ ಶಿಕ್ಷಣ ಅತ್ಯಂತ ಮಹತ್ವ ಪಡೆದಿದೆ ಎಂದರು.

ಮಕ್ಕಳು ಕಲಿಕೆ ಅವಧಿಯಲ್ಲಿ ಮೊಬೈಲ್ ಮತ್ತು ಟಿವಿಯ ದಾಸರಾಗದೆ ಶಿಕ್ಷಣದ ಕಡೆ ಹೆಚ್ಚಿನ ಗಮನ ನೀಡಬೇಕು. ಪಾಲಕರು ಸಹ ತಮ್ಮ ಕಷ್ಟಗಳನ್ನು ಬದಿಗೊತ್ತಿ ಉತ್ತಮ ಶಿಕ್ಷಣ ಕೊಡಿಸಲು ಪ್ರಯತ್ನಿಸುತ್ತಾರೆ. ಅವರ ಭರವಸೆಗಳನ್ನು ಮಕ್ಕಳು ಹುಸಿಗೊಳಿಸಬಾರದು ಎಂದರು.

ಗ್ರಾಮೀಣ ಭಾಗದ ಮಕ್ಕಳ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳಿಗೆ ಅನೇಕ ಸೌಲಭ್ಯ ಕಲ್ಪಿಸಲಾಗುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ದೇಶದಲ್ಲಿ ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಿದವರಲ್ಲಿ ಸರ್ಕಾರಿ ಶಾಲೆಯಲ್ಲಿ ಕಲಿತವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕ್ರೀಡೆ, ಕಲೆ, ಸಾಹಿತ್ಯ, ವಿಜ್ಞಾನ ಸೇರಿ ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಅವರನ್ನು ಮಾದರಿಯಾಗಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಮಕ್ಕಳು ಗೀತಗಾಯನ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಸಹ ಶಿಕ್ಷಕಿ ಸೌಭಾಗ್ಯವತಿ ಪಾಟೀಲ್, ಎಸ್‌ಡಿಎಂಸಿ ಪದಾಧಿಕಾರಿಗಳು, ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net