ಶಿಕ್ಷಕರ ನೇಮಕಕ್ಕೆ ಕ್ರಮ

tth (2)
ಬೇಗುವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ ನೆರವೇರಿಸಿದರು. ಆರಗ ಜ್ಞಾನೇಂದ್ರ, ಆರ್.ಎಂ.ಮಜುನಾಥ ಗೌಡ, ಸುಬ್ರಹ್ಮಣ್ಯ ಇತರರಿದ್ದರು.
Published on

ತೀರ್ಥಹಳ್ಳಿ: ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ವ್ಯಾಪ್ತಿಯ ಶೇ.80ರಷ್ಟು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಬೇಗುವಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೆದ್ದಾರಿ ಅಗಲೀಕರಣದಿಂದ ಸ್ಥಳಾಂತರವಾಗಿರುವ ಬೇಗುವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಶಾಲೆಗೆ ಅಗತ್ಯವಿರುವ ಕಟ್ಟಡ ಸೇರಿ ಮೂಲ ಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ. ಆದರೆ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವಲ್ಲಿ ಎಸ್‌ಡಿಎಂಸಿ ಸದಸ್ಯರು ಹೆಚ್ಚಿನ ಮುತುವರ್ಜಿ ವಹಿಸಬೇಕು. ಶಾಲೆಗಳು ಯಾವ ಸ್ಥಳದಲ್ಲಿ ನಡೆಯುತ್ತದೆ ಎಂಬುದು ಮುಖ್ಯವಲ್ಲ. ಗುಣಮಟ್ಟದ ಶಿಕ್ಷಣ ಮುಖ್ಯ. ಸರ್ಕಾರಿ ಶಾಲೆಯ ಶಿಕ್ಷಕರು ಎಲ್ಲರೂ ಅತ್ಯಂತ ಸಮರ್ಥರು. ಗ್ರಾಮೀಣ ಶಾಲೆಗಳ ಮಕ್ಕಳಿಗೂ ವಿಶೇಷ ತರಗತಿ ಮತ್ತಿತರ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

46 ಸಾವಿರ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಲಾಗಿದೆ. ಜನತೆಗೆ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಸಮಾಜ ನಿರ್ಮಾಣ ಕಾರ್ಯದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದು ಹೇಳಿದರು.

ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ತಾಲೂಕಿನ ಹಲವಾರು ಶಾಲೆಯ ಕಟ್ಟಡಗಳು ಶಿಥಿಲಗೊಂಡಿವೆ. ದುರಸ್ತಿ ಕಾರ್ಯಕ್ಕೆ ಆದ್ಯತೆ ನೀಡುವ ಅಗತ್ಯವಿದೆ. ಬಹುತೇಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರೇ ಕಾರ್ಯನಿರ್ವಹಿಸುತ್ತಿದ್ದಾರೆ. ಇಂದು ರಜತ ಮಹೋತ್ಸವ ನಡೆದ ಮರಗಳಲೆ ಶಾಲೆಯಲ್ಲಿ ಕೇವಲ ನಾಲ್ಕು ಮಕ್ಕಳು ಕಲಿಯುತ್ತಿದ್ದು, ಶಾಲೆಯ ಮುಕ್ತಾಯ ಸಮಾರಂಭದಂತಿತ್ತು. ಕೋಳಿ ಮೊಟ್ಟೆ ದರ ಹೆಚ್ಚಾಗಿದೆ. ಇಲಾಖೆಯಿಂದ ನೀಡುತ್ತಿರುವ ಹಣ ಸಾಲುತ್ತಿಲ್ಲ.

ಇದಕ್ಕೆ ಮುನ್ನ ತೂದೂರು ಗ್ರಾಪಂನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಅರಣ್ಯ ಸಮಸ್ಯೆ, ಹೆದ್ದಾರಿ ಅಗಲೀಕರಣಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.

ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ತೂದೂರು ಗ್ರಾಪಂ ಅಧ್ಯಕ್ಷೆ ಶಶಿಕಲಾ, ಎಸ್‌ಡಿಎಂಸಿ ಅಧ್ಯಕ್ಷ ಸುಬ್ರಹ್ಮಣ್ಯ, ಬಿಇಒ ವೈ.ಗಣೇಶ್, ಪಪಂ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net